ಬಸವ ನಾಡು
ವಿಜಯಪುರ- ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ ರಾಮ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ದೇಶಕ್ಕೆ ಕೊಡುಗೆ ನೀಡಬೇಕು ಎೞದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ ನೀಡಿದ್ದಾರೆ.
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ ರಾಮ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಬು ಜಗಜೀವನ ರಾಮ ಅವರು ಇಂದಿನ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಸಮಾಜಕ್ಕೆ ಅವರು ನೀಡಿದ ಕೊಡುಗೆ ಅಪಾರ. ಸಮಾಜ ಸೇವಕರಾಗಿ ಅವರು ನಡೆದ ದಾರಿಯೇ ನಮಗೆಲ್ಲ ದಾರಿದೀಪವಾಗಿದೆ. ಅವರ ತತ್ವ, ಸಿದ್ಧಾಂತಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಡಾ. ಬಾಬು ಜಗಜೀವನ ರಾಮ ಅವರ ನಡೆ ನುಡಿ, ಅವರ ಸಮಾಜ ಸೇವೆಯನ್ನು ಅರ್ಥ ಮಾಡಿಕೊಂಡು ನಡೆದಿರೆ ನಾವು ನಮ್ಮ ಜೀವನದಲ್ಲಿ ಯಶಸ್ವಿಯಾಗುತ್ತೇವೆ. ಅವರ ಸಾಧನೆಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಅವರು ಕರೆ ನೀಡಿದರು.
ಇಂದಿನ ಯುವಕರು ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕು. ಇದರಿಂದ ಒಳ್ಳೆಯ ನಾಗರಿಕನಾಗಲು ಸಾಧ್ಯ. ಯುವಕರಿಗೆ ಸರಕಾರಿ ಉದ್ಯೋಗ ಮಾತ್ರ ಉದ್ಯೋಗವಲ್ಲ. ನಾವು ನಮ್ಮ ಉಪಜೀವನಕ್ಕಾಗಿ ಮಾಡುವ ಕೆಲಸವೂ ಉದ್ಯೋಗವೇ ಆಗಿದೆ. ನಾವು ನಮ್ಮ ಜೀವನದಲ್ಲಿ ಮಾಡುವ ಪ್ರತಿಯೊಂದು ಕೆಲಸವನ್ನು ಪ್ರಾಮಾಣಿಕತೆಯಿಂದ, ಪ್ರೀತಿಯಿಂದ ಮಾಡಿದರೆ ನಾವು ಯಶಸ್ವಿಯಾಗುತ್ತೇವೆ ಎಂದು ಅವರು ತಿಳಿಸಿದರು.
ಯುವಕರು ಸಮಯ ಹಾಳು ಮಾಡದೆ ಇಂಥ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದುಕೊಂಡು ಅವರನ್ನು ಅರ್ಥ ಮಾಡಿಕೊಂಡು ಅವರ ಜೀವನ ಆದರ್ಶಗಳನ್ನು ಬದುಕಿನುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಪಿ. ಸುನೀಲ ಕುಮಾರ ಯುವಕರಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿ ಅನುಪಮ ಅಗ್ರವಾಲ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ದಲಿತ ಸಂಘರ್ಷ ಸಮಿತಿ ಸಂಚಾಲಕ ಸಿದ್ದು ರಾಯಣ್ಣನವರ, ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ, ದಲಿತ ಮುಖಂಡ ರಾಜು ತೊರವಿ ಸೇರಿದಂತೆ ನಾನಾ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.