ಬಸವ ನಾಡು
ವಿಜಯಪುರ- ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳು ಕೊರೊನಾ ದೃಢಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಬೇಕು. ತಾಲೂಕು ಮಟ್ಟದಲ್ಲಿ ಸರಿಯಾದ ರೀತಿ ಚಿಕಿತ್ಸೆ ನೀಡಿ ಅವಶ್ಯಕವಿದ್ದರೆ ಮಾತ್ರ ಜಿಲ್ಲಾ ಆಸ್ಪತ್ರೆಯ ಸಹಾಯವನ್ನು ತೆಗೆದುಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದ್ದಾರೆ.
ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಡೆಸಿದ ಅವರು, ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಆಸ್ಪತ್ರೆಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಜಿಲ್ಲಾ ಆಸ್ಪತ್ರೆಯಿಂದ ಒಂದು ತಂಡವನ್ನು ರಚನೆ ಮಾಡಿಕೊಂಡು ಪ್ರತಿಯೊಂದು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸರಕಾರದ ನಿಯಮದಂತೆ ಶೇ. 50 ಬೆಡ್‍ಗಳಿರುವುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಜನರಲ್ ಬೆಡ್, ಐಸಿಯು ಬೆಡ್, ಆಕ್ಸಿಜನಗಳು ಹಾಗೂ ವೆಂಟಿಲೇಟರ್‍ಗಳ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಳ್ಳಬೇಕು. ಪ್ರತಿನಿತ್ಯ ಸಂಗ್ರಹಿಸಿದ ಅಂಕಿ-ಸಂಖ್ಯೆಗಳನ್ನು ತಂತ್ರಾಂಶದ ಮೂಲಕ ಪ್ರತಿಯೊಂದು ಆಸ್ಪತ್ರೆಗಳಲ್ಲಿ ದಾಖಲಾದ ಹಾಗೂ ಡಿಸ್ಚಾರ್ಜ್ ಆದ ಕೊರೊನಾ ಪ್ರಕರಣಗಳನ್ನು ತಂತ್ರಾಂಶದ ಮೂಲಕ ಅಂಕಿ-ಸಂಖ್ಯೆಗಳನ್ನು ಪ್ರತಿನಿತ್ಯ ದಾಖಲೆ ಇಡಬೇಕು. ಅಲ್ಲದೇ, ಸಂಬಂಧಪಟ್ಟ ವೆಬ್‍ಸೈಟ್ ಗಳಲ್ಲಿ ಪ್ರತಿದಿನ ಮಾಹಿತಿಯನ್ನು ದಾಖಲಿಸಬೇಕು ಎಂದು ತಿಳಿಸಿದರು.
ಬಡ ಜನರು ಖಾಸಗಿ ಆಸ್ಪತ್ರೆಗಳಿಗೆ ಪರದಾಡದ ರೀತಿ ಜಿಲ್ಲೆ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳು ಕಾರ್ಯ ನಿರ್ವಹಿಸಬೇಕು. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳು ಹೆಚ್ಚು ದುಡ್ಡು ವಸೂಲಿ ಮಾಡದಂತೆ ನೋಡಿಕೊಳ್ಳಬೇಕು. ಹೆಚ್ಚು ದುಡ್ಡು ವಸೂಲಿ ಮಾಡಿದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿದಿನ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗ ಅವರು ಸೂಚನೆ ನೀಡಿದರು.
ಪುನಃ ಕೋವಿಡ್ ಕೇರ್ ಸೆಂಟರ್ ಗಳನ್ನು ಆರಂಭ ಮಾಡುವ ಅವಶ್ಯಕತೆ ಇರುವುದರಿಂದ ಮುಂದಿನ ದಿನಗಳಲ್ಲಿ ಸಭೆಯನ್ನು ಕರೆದು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ಆರಂಭ ಮಾಡುವ ಬಗ್ಗೆ ಚರ್ಚಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದರು.
ಈ ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರೆಡ್ಡಿ. ಜಿಲ್ಲಾಸ್ಪತ್ರೆಯ ಆರೋಗ್ಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.