ಪತ್ರಕರ್ತರಿಗೆ ಕೊರೊನಾ ಲಸಿಕೆ ಕಾರ್ಯಕ್ರಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

ಬಸವ ನಾಡು

ವಿಜಯಪುರ: ಕೊರೊನಾ ನಿಯಂತ್ರಣದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಕಾರ್ಯ ಅನನ್ಯ ಮತ್ತು ಪ್ರಶಂಸಾರ್ಹವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ವಿಜಯಪುರ ನಗರದಲ್ಲಿ ಜಿಲ್ಲಾ ಕೇಂದ್ರದ ಮಾಧ್ಯಮ ಪ್ರತಿನಿಧಿಗಳಿಗಾಗಿ ಜಿಲ್ಲಾಡಳಿತ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕೊರನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ನಿಯಂತ್ರಣದಲ್ಲಿ ಮಾಧ್ಯಮ ಪ್ರತಿನಿಧಿಗಳು ಸರಕಾರದ ಜೊತೆಗೆ ಕೈಜೋಡಿಸಿದ್ದಾರೆ. ಫ್ರಂಟ್ ಲೈನ್ ವಾರಿಯರ್ಸಗಳಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಮಾಧ್ಯಮ ಪ್ರತಿನಿಧಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಗಳನ್ನಾಗಿ ಘೋಷಿಸಿದೆ. ಅಲ್ಲದೇ, ವಿಜಯಪುರದಲ್ಲಿ ಪತ್ರಕರ್ತರಿಗಾಗಿ ಪ್ರತ್ಯೇಕವಾಗಿ ವಿಶೇಷ ರೀತಿಯಲ್ಲಿ ಲಸಿಕೆಯನ್ನು ನೀಡಲಾತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಗಾಟಿಸಿದ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡುತ್ತಿರುವುದು

ಕೊರೊನಾ ಲಸಿಕೆ ನೀಡುವುದರಿಂದ ಅಡ್ಡ ಪರಿಣಾಮ ಉಂಟಾಗುತ್ತದೆ ಎಂಬ ಭಯ ಸಾರ್ವಜನಿಕರಲ್ಲಿದ್ದು, ಈ ಭಯವನ್ನು ಹೋಗಲಾಡಿಸಲು ಮತ್ತು ಈ ಲಸಿಕೆಯಿಂದ ಯಾವುದೇ ಸಮಸ್ಯೆ ಇಲ್ಲ ಎಂಬುವುದನ್ನು ತಿಳಿಹೇಳುವ ನಿಟ್ಟಿನಲ್ಲಿ ಹಾಗೂ ಲಸಿಕೆ ಪಡೆಯಲು ಪ್ರೇರಣೆಗಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕಾ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಈ ದೇಶದ ಒಗ್ಗಟ್ಟು ಮತ್ತು ಒಳ್ಳೆಯ ಸಮಾಜಕ್ಕೆ ಆಧಾರಸ್ತಂಭವಾಗಿದ್ದು, ಅದರಂತೆ ಪತ್ರಿಕಾರಂಗವೂ ಗುರುತರ ಜವಾಬ್ದಾರಿಹೊಂದಿ, ಪ್ರತಿ ಮನೆ ಮನೆಗೆ ಒಳ್ಳೆಯ ಸಂದೇಶ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಅದರಂತೆ ತಪ್ಪು ಘಟಿಸಿದಾಗ ಎಚ್ಚರಿಕೆ ವಹಿಸುವಂತಹ ಕಾರ್ಯವನ್ನು ಮಾಡುತ್ತಿದ್ದು ಅಂಥ ಪತ್ರಿಕಾ ರಂಗದ ಮಾಧ್ಯಮ ಪ್ರತಿನಿಧಿಗಳಿಗೆ ಕೊರೊನಾ ಲಸಿಕೆ ಅತ್ಯವಶ್ಯಕವಾಗಿದೆ ಎಂಬುದನ್ನು ಈ ವಿಶೇಷವಾದ ಲಸಿಕಾ ಕಾರ್ಯಕ್ರಮ ಇಲ್ಲಿ ಆಯೋಜಿಸಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

ಕೊರೊನಾ ಲಸಿಕೆ ಪಡೆದ ಪತ್ರಕರ್ತರು

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ನಿನ್ನೆ ನಿಧನರಾದ ಎಫ್ ಡಿ ಎ ಚಂದ್ರಕಲಾ ಜೋಶಿ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಲಸಿಕಾ ಕಾರ್ಯಕ್ರಮದ ಸಂದರ್ಭದಲ್ಲಿ ಒಟ್ಟು 45ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳಿಗೆ ಪ್ರಥಮ ಹಂತದ ಲಸಿಕೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ. ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ್. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಎಸ್ಪಿ ಅನುಪಮ್ ಅಗ್ರವಾಲ, ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪ್ಸೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಮಹೇಷ ನಾಗರಬೆಟ್ಟ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ. ಬಿ. ಬಿರಾದಾರ. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಚ್ಚೆಂದ್ರ ಲಂಬು, ವಿನಾಯಕ ಸೊಂಡೂರ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಲೇಮಾನ್ ನದಾಫ ಸ್ವಾಗತಿಸಿದರು.

Leave a Reply

ಹೊಸ ಪೋಸ್ಟ್‌