ಬೆಂಗಳೂರು: ಎಲ್ಲ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕೊರೊನಾ ವಿರುದ್ಧ ಫೀಲ್ಡ್ ಕಮಾಂಡರ್ ರೀತಿಯಲ್ಲಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜತೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ನಂತರ ಸಚಿವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದ್ದಾರೆ.
ರಾಜ್ಯ ಸರಕಾರದ ಮುಖ್ಯ ಆದೇಶಗಳನ್ನು ಸ್ಥಳೀಯ ಮಟ್ಟದಲ್ಲಿ ಕಾರ್ಯಗತ ಮಾಡುವ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದು. ಅದರ ಮೇಲುಸ್ತುವಾರಿ ಜಿಲ್ಲೆಯ ಜನಪ್ರತಿನಿಧಿಗಳದ್ದಾಗಿದೆ. ಈ ಕೆಲಸವನ್ನು ಕೇವಲ ಜಿಲ್ಲಾಧಿಕಾರಿ ಅಲ್ಲದೆ ಜಿಲ್ಲಾ ಮಟ್ಟದ ಎಲ್ಲ ಪ್ರಮುಖ ಅಧಿಕಾರಿಗಳು ಮಾಡಬೇಕಾಗಿದೆ. ಸ್ಥಳೀಯವಾಗಿ ಕೆಲ ಬದಲಾವಣೆಗಳ ಜೊತೆಗೆ ಕೊರೊನಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.
ಗ್ರಾಮೀಣ ಮತ್ತು ಉಪನಗರ ಪ್ರದೇಶಗಳಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸುವುದು ದೊಡ್ಡ ಸವಾಲು. ಈ ಕೆಲಸಕ್ಕಾಗಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಕಾರ್ಯಪಡೆ ರಚನೆ ಮಾಡಬೇಕು. ಸ್ತ್ರೀಶಕ್ತಿ, ಮಹಿಳಾ ಮತ್ತು ಯುವಕರ ಸಂಘ-ಸಂಸ್ಥೆಗಳ ನೆರವು ಪಡೆಯಬೇಕು. ಸೋಂಕಿತ ವ್ಯಕ್ತಿಯ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಮೇಲೆ ನಿಗಾ ಇರಿಸಿ ಅವರಿಗೆ ಸೋಂಕು ತಗುಲದಂತೆ ಮಾಡಿದರೆ ಕೊರೊನಾ ನಿಯಂತ್ರಣ ಸಾಧ್ಯ ಎಂದು ಮೋದಿ ತಿಳಿಸಿದ್ದಾರೆ. ಈ ಕೆಲಸದಲ್ಲಿ ಜನಪ್ರತಿನಿಧಿಗಳು ಪಕ್ಷ ಭೇದ ಮರೆತು ಕೆಲಸ ಮಾಡಿದರೆ ಮಾತ್ರ ಕೊರೊನಾ ವಿರುದ್ಧ ಜಯ ಗಳಿಸಲು ಸಾಧ್ಯ ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಕ್ಕಳ ಮೇಲೆ ಪ್ರಭಾವ ತಪ್ಪಿಸಲು ಕ್ರಮ
ಈ ಮಧ್ಯೆ, ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಬಹುದು ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಕ್ಕಳಿಗೆ ಸ್ಥಳೀಯ ಭಾಷೆಗಳಲ್ಲಿ ಕಾರ್ಟೂನ್, ಲೇಖನ, ಕಥೆ ಮುಂತಾದವುಗಳ ಮೂಲಕ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯ ಸರಕಾರಗಳಿಗೆ ಮೋದಿ ಸೂಚನೆ ನೀಡಿದ್ದಾರೆ. ಮಕ್ಕಳ ತಿಳುವಳಿಕೆ ಮಟ್ಟಕ್ಕೆ ಇಳಿದು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ರಾಜ್ಯ ಸರಕಾರಗಳಿಗೆ ಸಲಹೆ ನೀಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಲಾಕಡೌನ್ ಚರ್ಚೆಯಾಗಿಲ್ಲ
ಲಾಕಡೌನ್ ಗೆ ಸಂಬಂಧಪಟ್ಟಂತೆ ಈ ಸಭೆಯಲ್ಲಿ ಯಾವುದೇ ಚರ್ಚೆಯಾಗಲಿಲ್ಲ. ಆದರೆ ಈ ಕುರಿತ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಪ್ರಧಾನಿ ಆಯಾ ರಾಜ್ಯ ಸರಕಾರಗಳಿಗೆ ನೀಡಿದ್ದಾರೆ. ಲಾಕಡೌನ್ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದರು.