ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಆದರೂ ಜನರು ಲಾಕಡೌನ್ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟರ್ ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು. ಈಗ ಜಾರಿಯಲ್ಲಿರುವ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಲಾಕಡೌನ್ ಯಶಸ್ವಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಮೂರ್ನಾಲ್ಕು ದಿನ ನಿರಂತರವಾಗಿ ಲಾಕಡೌನ್ ಜಾರಿ ಮಾಡಿದ್ದಾರೆ. ಆದರೂ ಕೂಡ ಜನ ಗಂಭೀರತೆಯನ್ನು ಅರಿಯುತ್ತಿಲ್ಲ. ಲಾಕಡೌನ್ ಗೆ ಸಹಕಾರ ನೀಡುತ್ತಿಲ್ಲ. ಲಾಕಡೌನ್ ಯಾಕೆ ಜಾರಿಯಾಗಿದೆ? ಎಂಬುದನ್ನು ಅರ್ಥ ಮಾಡಿಕೊಳ್ಳದಿದ್ದರೆ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಂದಿಗ್ಧದ ಆರ್ಥಿಕ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬಡಜನರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕು ಎಂಬುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ. ಇವೆಲ್ಲವೂ ಮುಖ್ಯಮಂತ್ರಿಗಳ ಗಮನಕ್ಕೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದೇ ವೇಳೆ, ವಸತಿ ಸಚಿವ ವಿ. ಸೋಮಣ್ಣ ಮಾತನಾಡಿ, ಕೊಡಗಿನಲ್ಲಿ ಡಾ. ಶಿವಕುಮಾರ ಅವರನ್ನು ಅಮಾನತು ಮಾಡಲಾಗಿದೆ. ಒಂದು ವಾರದಲ್ಲಿ ಅವರು ನಡೆಸಿರುವ ಅವ್ಯವಹಾರದ ಕುರಿತು ತನಿಖೆ ನಡೆಸಲಾಗುತ್ತದೆ. ಅಲ್ಲಿನ ಮೆಡಿಕಲ್ ಸುಪರಿಂಟೆಂಡೆಂಟ್ ರಿಂದ ನೊಟೀಸ್ ನೀಡಲಾಗಿದೆ. ಅಲ್ಲಿನ ಡೀನ್ ಅಸಮರ್ಥವಾಗಿರುವುದರಿಂದ ಅವರನ್ನು ಬದಲಾವಣೆ ಮಾಡುವಂತೆ ಈಗಾಗಲೇ ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.