ಬೆಂಗಳೂರು: ಖಾಸಗಿ ಸಂಘ-ಸಂಸ್ಥೆಗಳ ಸಹಭಾಗಿತ್ವವಿದ್ದಾಗ ಮಾತ್ರ ಪರಿಣಾಮಕಾರಿಯಾಗಿ ಕೊರೊನಾ ನಿಯಂತ್ರಣ ಸಾಧ್ಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ರಾಜೀವ್ ಗಾಂಧಿ ಮಹಾವಿದ್ಯಾಲಯದಲ್ಲಿ ಆರಂಭವಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಖಾಸಗಿ ಸಂಘ-ಸಂಸ್ಥೆಗಲ ಸಹಯೋಗದಿಂದ ಕೊರೊನಾ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಹೀಗಾಗಿ ಕೊರೊನಾ ವಿರುದ್ಧದ ಹೋರಾಟಕ್ಕೆ ಖಾಸಗಿ ಸಂಘ-ಸಂಸ್ಥೆಗಳು ಮುಂದಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಕೊರೊನಾ ವಿರುದ್ಧ ಪಕ್ಷಾತೀತವಾಗಿ ಹೋರಾಟ ಆರಂಭವಾಗಿದೆ. ಖಾಸಗಿ ಸಂಘ-ಸಂಸ್ಥೆಗಳು ಕೊರೊನಾ ನಿಯಂತ್ರಣಕ್ಕೆ ಶಕ್ತಿಮೀರಿ ಪ್ರಯತ್ನ ಮಾಡುತ್ತಿವೆ. ಇದು ನಿಜಕ್ಕೂ ಶ್ಲಾಘನೀಯವಾಗಿದೆ. ಎಲ್ಲ ಪಕ್ಷಗಳ ಶಾಸಕರು ಪಕ್ಷಭೇದ ಮರೆತು ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ಮಾಡುತ್ತಿದ್ದಾರೆ. ಇದಕ್ಕೆ ಹೆಬ್ಬಾಳದ ರಾಜೀವ ಗಾಂಧಿ ದಂತ ಮಹಾವಿದ್ಯಾಲಯದ ಕೋವಿಡ್ ಕೇರ್ ಸೆಂಟರ್ ಸಾಕ್ಷಿಯಾಗಿದೆ. ಈ ಸೆಂಟರ್ ಸ್ಥಾಪನೆಗೆ ಬಿಬಿಎಂಪಿ ಎಲ್ಲ ರೀತಿಯ ಸಹಕಾರ ನೀಡಿದೆ ಎಂದು ಅವರು ತಿಳಿಸಿದರು.
ಕೇವಲ ಬೆಂಗಳೂರು ಅಷ್ಟೇ ಅಲ್ಲ. ರಾಜ್ಯಾದ್ಯಂತ ಖಾಸಗಿ ಸಹಭಾಗಿತ್ವದಲ್ಲಿ ಕೊರೊನಾ ನಿಯಂತ್ರಣಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಸರಕಾರ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಅವರು ತಿಳಿಸಿದರು
ಅವರ ಪ್ರಶಂಸೆ- ನಮಗೆ ಪ್ರೋತ್ಸಾಹ
ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಹಗಲಿರುಳು ಕೆಲಸ ಮಾಡುತ್ತಿರುವ ಪೊಲೀಸರ ಕರ್ತವ್ಯವನ್ನು ಹೈಕೋರ್ಟ್ ಮುಕ್ತಕಂಠದಿಂದ ಪ್ರಶಂಸೆ ಮಾಡಿದೆ. ಮಳೆ, ಗಾಳಿ, ಬಿಸಿಲು ಎನ್ನದೆ 24×7 ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಅವರು ಜನರ ಪ್ರೀತಿ ವಿಶ್ವಾಸವನ್ನು ಗಳಿಸುತ್ತಾರೆ. ತಪ್ಪು ಮಾಡಿದವರಿಗೆ ಶಿಕ್ಷೆಯನ್ನು ನೀಡುತ್ತಾರೆ. ಹೈಕೋರ್ಟ್ ನ ಈ ಪ್ರಶಂಸೆ ನಮಗೆ ಪ್ರೋತ್ಸಾಹ ಎಂದು ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ವಸತಿ ಸಚಿವ ವಿ ಸೋಮಣ್ಣ, ಹೆಬ್ಬಾಳ ಶಾಸಕ ಬೈರತಿ ಸುರೇಶ ಉಪಸ್ಥಿತರಿದ್ದರು.