ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮಿತಿ ರಚನೆ ಮಾಡಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠದ ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕಾನೂನು ತಜ್ಞರ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶಸಿಂಗ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮತಾನಾಡಿದ ಬಸವರಾಜ ಬೊಮ್ಮಾಯಿ, ಮೇಕೆದಾಟು ಯೋಜನೆ ಪ್ರದೇಶ ವ್ಯಾಪ್ತಿಯ ಕಚ್ಚಾ ರಸ್ತೆಯ ಕುರಿತಂತೆ ತಮಿಳುನಾಡಿನ ಪತ್ರಿಕೆಯಲ್ಲಿ ವರದಿ ಕಟವಾಗಿದೆ. ಅದನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠ ಸಮಿತಿಯೊಂದನ್ನು ರಚನೆ ಮಾಡಿದೆ. ಅದು ಸಮಂಜಸವಾದ ಕ್ರಮ ಅಲ್ಲ. ಹೀಗಾಗಿ ಈ ಆದೇಶವನ್ನು ಹಸಿರು ನ್ಯಾಯಾಧೀಕರಣ ಪೀಠದ ಮುಂದೆಯೇ ಪ್ರಶ್ನಿಸಲು ನಾವು ನಿರ್ಧರಿಸಿದ್ದೇವೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠ ತನ್ನ ಈ ಆದೇಶವನ್ನು ಮರು ಪರಿಶೀಲಿಸಬೇಕೆಂದು ಮನವಿ ಮಾಡಿಕೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಸಭೆಯಲ್ಲಿ ತಿಳಿಸಿದರು.