ತುಮಕೂರು: ಲಾಕಡೌನ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ನಾನಾ ವಲಯಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಪ್ಯಾಕೇಜ್ ನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಅದಕ್ಕೆ ಅಗತ್ಯವಾದ ಹಣ ಬಿಡುಗಡೆ ಮಾಡುತ್ತೇವೆ. ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ತುಮಕೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತಮಾಡಿದ ಅವರು, ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತಡೆಯಲು ಸಕಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ತುಮಕೂರು ಉಸ್ತುವಾರಿ ಸಚಿವರು ಮತ್ತು ಸಂಸದರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲೆಯಲ್ಲಿ ಕೊರಪನಾ ನಿಯಂತ್ರಣದ ಕುರಿತು ಸಭೆ ನಡೆಸಿದ್ದೇನೆ. ತುಮಕೂರು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ, ಜಿ. ಪಂ. ಸಿಇಓ ಮತ್ತು ಎಸ್ಪಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತುಮಕೂರು ಜಿಲ್ಲೆಯಲ್ಲಿ 67392 ಪ್ರಕರಣಗಳು ಕಂಡು ಬಂದಿವೆ.
ಕೊರೊನಾ ಪಾಸಿಟಿವಿಟಿ ಶೇ.25.28 ಇದೆ. ಇದನ್ನು ಶೇ.10ಕ್ಕೆ ಇಳಿಸಬೇಕಾಗಿದೆ. ಜಿಲ್ಲೆಗೆ ಆಕ್ಸಿಜನ್ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಬೆಡ್ ಗಳನ್ನು ಒದಗಿಸಲಾಗುತ್ತಿದೆ.
ಸರಕಾರ, ದಾನಿಗಳ ನೆರವಿನಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಈಗ ಕೊರೊನಾ ಪಾಸಿಟಿವ್ ಸಂಳ್ಯೆ ಕಡಿಮೆಯಾಗುತ್ತಿದೆ. ಸೋಂಕು ನಿಯಂತ್ರಿಸಲು ಸರಕಾರ ನೆರವು ನೀಡುತ್ತಿದೆ. ಸಚಿವ ಮಾಧುಸ್ವಾಮಿ ಸಭೆಯಲ್ಲಿ ಕೆಲವು ವಿಷಯ ಪ್ರಸ್ತಾಪಿಸಿದ್ದಾರೆ. ಆ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.