ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ನೂತನ ತಾಲೂಕು ಕೇಂದ್ರಗಳಾದ ಬಬಲೇಶ್ವರ ಮತ್ತು ತಿಕೋಟಾದಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ನೂತನ ತಾಲೂಕು ಕೇಂದ್ರಗಳಲ್ಲಿ ಎಲ್ಲ ತಾಲೂಕು ಮಟ್ಟದ ನಾನಾ ಇಲಾಖೆಗಳ ಕಛೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ತಲಾ ರೂ. 10 ಕೋ. ವೆಚ್ಚದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ಎರಡು ಕಡೆ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಬಲೇಶ್ವರದಲ್ಲಿ ಅಡವಿಸಂಗಾಪುರ ರಸ್ತೆಯಲ್ಲಿರುವ ಸರಕಾರಿ ಜಾಗೆಯಲ್ಲಿ ಹಾಗೂ ತಿಕೋಟಾದಲ್ಲಿ ಹಳೆಯ ಪ್ರವಾಸಿ ಮಂದಿರದ ಜಾಗದಲ್ಲಿ ಈ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗುವುದು. ಈ ಬಗ್ಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಎಂ. ಬಿ. ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ