ವಿಜಯಪುರ: ಕೊರೊನಾ ಮೂರನೇ ಅಲೆಯಲ್ಲಿ ಸೋಂಕಿತ ಮಕ್ಕಳಿಗೆ ತುರ್ತು ಚಿಕಿತ್ಸೆ ಒದಗಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ವೈದ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ.
ವಿಜಯಪುರ ನಗರದ ಬಿದರಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿರುವ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮೂರನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಈ ಕುರಿತು ಈಗಿನಿಂದಲೇ ಅವಶ್ಯಕ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.
ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸೋಂಕಿಗೆ ತುತ್ತಾಗುವ ಬಗ್ಗೆ ಈ ಹಿಂದೆ ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ ತಕ್ಷಣ ಅವಶ್ಯಕ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮತ್ತು ಮಕ್ಕಳ ವೈದ್ಯರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸೂಕ್ತ ವೆಂಟಿಲೇಟರಗಳು, ಆಕ್ಸಿಜನ್ ಸೌಲಭ್ಯ, ಹಾಸಿಗೆಗಳ ಲಭ್ಯತೆ ಮತ್ತು ಅಂಬುಲೆನ್ಸ್ ಸೇರಿದಂತೆ ಮಕ್ಕಳ ಚಿಕಿತ್ಸಾ ಸೌಕರ್ಯದ ಬಗ್ಗೆ ಪರಿಶೀಲಿಸಿ ಅಗತ್ಯ ಸಿದ್ಧತೆಗೆ ಈಗಿನಿಂದಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಅಲ್ಲದೇ, ಕೆಪಿಎಂಇ ಕಾಯಿದೆಯಡಿ ನೊಂದಾಯಿತ ಖಾಸಗಿ ಆಸ್ಪತ್ರೆಗಳು ಮತ್ತು ಚಿಕ್ಕಮಕ್ಕಳ ತಜ್ಞರೊಂದಿಗೂ ಸಹ ಈ ಕುರಿತು ಚರ್ಚಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕಿತ ಮಕ್ಕಳಿಗೆ ಸಕಾಲದಲ್ಲಿ ತುರ್ತು ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ವೈದ್ಯರು ಸಿದ್ಧರಾಗಬೇಕು. ಸಕಲ ಸೌಕರ್ಯಗಳೊಂದಿಗೆ ನುರಿತ ಸಿಬ್ಬಂದಿ ಇರುವುದರ ಬಗ್ಗೆ ಖಾತರಿ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿ, ಸಿಎಂ ಡಾ. ಲಕ್ಕಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ , ಮಕ್ಕಳ ತಜ್ಞ ಡಾ. ಎಲ್. ಎಚ್. ಬಿದರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.