ವಿಜಯಪುರ :ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 18 ರಿಂದ 45 ವರ್ಷದೊಳಗಿನ ಮುಂಚೂಣಿ ಕಾರ್ಯಕರ್ತರನ್ನು ಗುರುತಿಸಬೇಕು. ಅದರಂತೆ 45 ವರ್ಷ ಮೇಲ್ಪಟ್ಟವರಿಗೂ ಒಂದು ವಾರದಲ್ಲಿ ಗುರುತಿಸಿ ಕೋವ್ಯಾಕ್ಸಿನ್ ಎರಡನೇ ಲಸಿಕೆ ನೀಡಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಸೂಚಿಸಿದ್ದಾರೆ.
ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ಮತ್ರು ತಾಲೂಕಯ ಮಟ್ಟದ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಮೊಬೈಲ್) ಲಸಿಕಾ ತಂಡಗಳನ್ನು ನೇಮಕ ಮಾಡಲಾಗಿದ್ದು, ಈ ಲಸಿಕಾ ತಂಡಗಳು 45 ವರ್ಷ ಮೇಲ್ಪಟ್ಟ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ಕೋವ್ಯಾಕ್ಸಿನ್ ಎರಡನೇ ಲಸಿಕೆಯನ್ನು ಮಾತ್ರ ಕೊಡಿಸಬೇಕು ಎಂದು ಹೇಳಿದರು.
ಅಂಕಿ-ಸಂಖ್ಯೆ ತಂಡದವರು 18 ರಿಂದ 44 ವರ್ಷದ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿ ನಮೂನೆ ಮೂರರಲ್ಲಿ ನೋಡಲ್ ಅಧಿಕಾರಿಗಳ ಸಹಿ ಇದ್ದ ಬಗ್ಗೆ ಖಾತ್ರಿಪಡಿಸಿಕೊಂಡು ಲಸಿಕೆ ಪಡೆಯಬಹುದು. ಅಂಗವಿಕಲರು ಅವರ ಜೊತೆಗೆ ಒಬ್ಬ ಸಹಾಯಕರು ಅವರ ಗುರುತಿನ ಚೀಟಿಯೊಂದಿಗೆ ಲಸಿಕೆ ಹಾಕಿಸಿಕೊಳ್ಳಬಹುದು. ಅವರಿಗೆ ನಮೂನೆ ಮೂರರ ಅವಶ್ಯಕತೆ ಇರುವುದಿಲ್ಲ ಎಂದು ಅವರು ಹೇಳಿದರು.
ಕಟ್ಟಡ ಕಾರ್ಮಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಲಸಿಕೆ ಹಾಕಿಸಿಕೊಳ್ಳಬಹುದು. ಒಂದೊಂದು ತಂಡ ಸುಮಾರು 100 ಜನರಿಗೆ ಲಸಿಕೆ ಹಾಕಿಸಲು ಕ್ರಮ ವಹಿಸಬೇಕು. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊಡಬಹುದಾಗಿದ್ದು, ಇದರಲ್ಲಿ ಕೋವಿಶೀಲ್ಡ್ ಪ್ರಥಮ ಮತ್ರು ಎರಡನೇ ಲಸಿಕೆಯನ್ನು ಕೊಡಬಹುದು. ಕೋವ್ಯಾಕ್ಸಿನ್ ಎರಡನೇ ಲಸಿಕೆ ಮಾತ್ರ ಕೊಡಿಸಬೇಕು. ಅದರಂತೆ ಅರ್ಜಿ ನಮೂನೆ 3 ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಇದರಲ್ಲಿ ಕುಟುಂಬ ಸದಸ್ಯರಿಗೆ ಅವಕಾಶ ಇರುವುದಿಲ್ಲ ಜಿಲ್ಲಾಧಿಕಾರಿಗಳು ತಿಳಿಸಿದರು.
ವಿಜಯಪುರ ಜಿಲ್ಲೆಯಲ್ಲಿ 62 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು ಇದರಲ್ಲಿ 9 ಸಿ ಎಚ್ ಸಿ ಇವೆ. ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಲಸಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ಮಾಡಬೇಕು. ಎಲ್ಲಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಅಲ್ಲದೇ, ಅವರ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದರು.
ಈಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಕಣಾಧಿಕಾರಿ ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ , ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಮಹೇಶ ನಾಗರಬೆಟ್ಟ, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳು, ತಾ. ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.