ವಿಜಯಪುರ: ಕೊರೊನಾ ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಬೇಕಾಗುವ ಅವಶ್ಯಕ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ರೋಗ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ ಸಭೆ ನಡೆಸಿದ ಅವರು ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆತಲ್ಲಿ ಬಾಧಿತರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ,ತಾಲೂಕಾಸ್ಪತ್ರೆ ಹಾಗೂ ನಾನಾ ಖಾಸಗಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಸಕಲ ಸಿದ್ಧತೆಗಳೊಂದಿಗೆ ಸನ್ನದ್ಧರಾಗಿರಬೇಕು ಎಂದು ಸೂಚನೆ ನೀಡಿದರು.
ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿಯೂ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಎನ್ ಐ ಸಿ ಯು, ಪಿ ಐ ಸಿ ಯು ಸೌಲಭ್ಯಗಳೊಂದಿಗೆ ಸಮನ್ವಯ ಸಮಿತಿಯನ್ನು ರೂಪಿಸಿ ಕೊರೊನಾ ಸೋಂಕಿತ ಮಕ್ಕಳ ನಿರ್ವಹಣಾ ಕ್ರಿಯಾ ಯೋಜನೆಯನ್ನು ರೂಪಿಸಿ ಸಜ್ಜಾಗಿರಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ದಿಂದ ತಮ್ಮ ತಂದೆ ತಾಯಿಯರನ್ನು ಕಳೆದುಕೊಂಡ 3 ಮಕ್ಕಳು ಅನಾಥವಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂಥ ಮಕ್ಕಳ ಪೋಷಣೆ ಬಗ್ಗೆ ನಿಗಾ ಇಡಬೇಕು. ಇಂತಹ ಮಕ್ಕಳ ಭವಿಷ್ಯಕ್ಕಾಗಿ ಈಗಾಗಲೇ ಮುಖ್ಯಮಂತ್ರಿಗಳು ಬಾಲ ಸೇವಾ ಯೋಜನೆ ಜಾರಿಗೊಳಿಸಿದ್ದಾರೆ. ಇದರಡಿಯ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆಯಲ್ಲಿ ತಂದೆ ಮತ್ತು ತಾಯಿ ಇವರಿಬ್ಬರಲ್ಲಿ ಒಬ್ಬರನ್ನು ಕಳೆದುಕೊಂಡಿರುವ 289 ಮಕ್ಕಳ ಬಗ್ಗೆಯೂ ನಿಗಾ ಇಡಬೇಕು. ಅನಾಥರಾಗುವ ಮಕ್ಕಳ ಭವಿಷ್ಯ ರೂಪಿಸಲು ದತ್ತು ನಿಯಮ, ಕಾನೂನು ಅನುಸಾರ ಯಾರಾದರೂ ದಾನಿಗಳು, ಸಂಘ-ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಭವಿಷ್ಯ ರೂಪಿಸಲು ಮುಂದೆ ಬಂದಲ್ಲಿ ದತ್ತು ನಿಯಮ ಪ್ರಕಾರ ಅವರಿಗೆ ಸರಕಾರದಿಂದ ಸಹಕಾರ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಮುಂದಿನದಿನಗಳಲ್ಲಿ ಪಿಡಿಯಾಟ್ರಿಕ್ಸ ಕೋವಿಡ್ ಮಕ್ಕಳ ನಿರ್ವಹಣೆ, ಕೋವಿಡ ಕೇರ್ ಸೆಂಟರ್ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ತುರ್ತು ಸಂದರ್ಭದಲ್ಲಿ ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಒದಗಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಕೊರೊನಾ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಯೋಜನೆ ರೂಪಿಸಬೇಕು. ಡೆತ್ ಆಡಿಟ್ ಗಳನ್ನು ಸರಿಯಾಗಿ ನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಮತ್ತು ಮಹಾರಾಷ್ಟ್ರ ಸರಕಾರದೊಂದಿಗೆ ಸಂಪರ್ಕದೊಂದಿಗೆ ನಿರ್ವಹಣೆ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾತನಾಡಿ, ಬ್ಲ್ಯಾಕ್ ಫಂಗಸ್ ಪ್ರಕರಣಗಳ ಮತ್ತು ಕೋವಿಡ್ ನಿರ್ವಹಣೆ ಕುರಿತು ಸಮಗ್ರ ಮಾಹಿತಿ ನೀಡಿದರು. ಮಧುಮೇಹ ರೋಗಿ, ಕೋವಿಡ್ ದಿಂದ ಗುಣಮುಖರಾದ ರೋಗಿಗಳ ಬಗ್ಗೆ ಆರೋಗ್ಯ ವಿಚಾರಣೆ ನಡೆಸಬೇಕು. ಲಸಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಸಚಿವ ನಿರಾಣಿ ನಿರಾಣಿ ಸಂಸ್ಥೆಯಿಂದ ಜಿಲ್ಲೆಯ ಪ್ರತಿ ಗ್ರಾ.ಪಂ. ಮತ್ತು ನಗರದ 35 ವಾರ್ಡಗಳ ವ್ಯಾಪ್ತಿಯಲ್ಲಿ ಬಳಸಲು ವಿಜಯಪುರ ಜಿಲ್ಲಾಡಳಿತಕ್ಕೆ ಸ್ಯಾನಿಟೈಸರ್ ಗಳನ್ನು ಪೂರೈಸಿದ್ದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ಅಭಿನಂದನೆ ಸಲ್ಲಿಸಿದರು.
ನಿರಾಣಿ ಸಂಸ್ಥೆ ವಿಜಯಪುರ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗೆ ಇಂಥ ಸೇವೆಯನ್ನು ಕಲ್ಪಿಸುತ್ತಿದ್ದು ಕೊರೊನಾದಂಥ ಪರಿಸ್ಥಿತಿಯಲ್ಲಿ ಇಂತಹ ಸೇವಾ ಕಾರ್ಯ ಮಾಡಿದ್ದ ನಿರಾಣಿ ಸಹೋದರರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವೆ ಶಶಿಕಲಾ ಜೊಲ್ಲೆ ಇದೇ ಸಂದರ್ಭದಲ್ಲಿ ತಿಳಿಸಿದರು.
ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಡಾ. ದೇವಾನಂದ ಚೌಹಾಣ್, ಸಾವಯವ ಬೀಜ ಪ್ರನಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ, ಹನುಮಂತ ನಿರಾಣಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಗೋವಿಂದರೆಡ್ಡಿ, ಎಸ್ಪಿ ಅನುಪಮ್ ಅಗರವಾಲ, ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.