ವಿಜಯಪುರ: ಕೇಂದ್ರ ಸರಕಾರದಿಂದ ಲಭ್ಯವಾಗುವ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಜಯಪುತ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸರಕಾರದ ನಾನಾ ಯೋಜನೆಗಳ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದತು.
ರೈತರ ಅನುಕೂಲಕ್ಕಾಗಿ ವಿದ್ಯುತ್ ಟ್ರಾನ್ಸಫಾರ್ಮರ್ ಸಮಸ್ಯೆ ಸೇರಿದಂತೆ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಜಿಲ್ಲೆಯಲ್ಲಿರುವ ಸರಕಾರಿ ಶಾಲೆಗಳ ಕಟ್ಟಡ ಹಾಗೂ ಕೊಠಡಿಗಳ ದುರಸ್ತಿ ಬಗ್ಗೆ ಗಮನ ಹರಿಸಲು ಯೋಜನಾ ಸಮನ್ವಯಾಧಿಕಾರಿಗಳು ಮತ್ತು ಸರ್ವ ಶಿಕ್ಷಣ ಅಭಿಯಾನದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಿಗುವ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಗುರುತಿಸುವ ಕಾರ್ಯವಾಗಬೇಕು ಮತ್ತು ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸಂಸದರು ಸೂಚಿಸಿದರು.
ಪಿಂಚಣಿ ಸೌಲಭ್ಯಗಳು ಸರಿಯಾಗಿ ಸಿಗುವಂತಾಗಬೇಕು. ಜಿಲ್ಲಾ ಕೈಗಾರಿಕೆ ಕೇಂದ್ರದಿಂದ ಯುವಕರಿಗೆ ತರಬೇತಿಯನ್ನು ನೀಡಬೇಕು. ಸಾಲ ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು.
ಅಲಿಯಾಬಾದ್ ಬಳಿ ಚತುಷ್ಪಥ ರೇಲ್ವೆ ಮಾರ್ಗ ಮತ್ತು ಮುಳವಾಡ ಬಳಿ ರೇಲ್ವೆ ಕೆಳಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಬುರಣಾಪುರ ವಿಮಾನ ನಿಲ್ದಾಣ ಕಾಮಗಾರಿ ಉತ್ತಮವಾಗಿ ನಡೆಯಿತ್ತಿದೆ ಎಂದು ರಮೇಶ ಜಿಗಜಿಣಗಿ ಇದೇ ವೇಳೆ ಮೆಚ್ಚುಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಸ್ವಚ್ಛ ಭಾರತ ಮಿಷನ ಯೋಜನೆಯಡಿ ನಗರದಲ್ಲಿ ಕಸ ವಿಂಗಡಣೆ ಮಾಡಿ ಕಸ ವಿಲೇವಾರಿ ಮಾಡುವ ಕೆಲಸ ಒಳ್ಳೆಯ ರೀತಿಯಲ್ಲಿ ನಡೆಯುತ್ತಿದೆ. ನಗರದ ಹೊರ ವಲಯದಲ್ಲಿ 20 ಎಕರೆ ಭೂಮಿಯಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿದೆ. ವಿಮಾನ ನಿಲ್ದಾಣದ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗೋವಿಂದರೆಡ್ಡಿ, ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ. ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸ್ಕೌಟ್ಸ ಮತ್ತು ಗೈಡ್ಸ ವಿದ್ಯಾರ್ಥಿಗಳಿಗೆ ಮಾಸ್ಕ ವಿತರಿಸಲಾಯಿತು.