ಎಸ್ ಎಸ್ ಎಲ್ ಸಿ ನಕಲು ಮುಕ್ತ ಪರೀಕ್ಷೆ ನಡೆಸಿ- ಕೊರೊನಾ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಎಸ್. ಎಸ್. ಎಲ್. ಸಿ. ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ ನಕಲು ಮುಕ್ತ ಪರೀಕ್ಷೆ ನಡೆಸಿ ಹಾಗೂ ಕೊರೊನಾ ಮಾರ್ಗಸೂಚಿಗಳ ಅನ್ವಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ಜು. 19 ರಿಂದ 22 ರವರೆಗೆ ಜಿಲ್ಲೆಯ ಒಟ್ಟು 188 ಪರೀಕ್ಷೆ ಕೇಂದ್ರಗಳಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆ ನಡೆಯಲಿದೆ‌. ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ ನಕಲು ಮುಕ್ತ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಎಲ್ಲಾ ತಾಲೂಕಿನ ತಹಶೀಲ್ದಾರರಿಗೆ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವುದೇ ವಿದ್ಯಾರ್ಥಿಗಳು ಕೆಮ್ಮು, ಜ್ವರ, ನೆಗಡಿ, ಇತ್ಯಾದಿ ಲಕ್ಷಣಗಳನ್ನು ಹೊಂದಿದ್ದರೆ ಕೂಡಲೇ ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ಎನ್‌-95 ಮಾಸ್ಕ್ ನೀಡಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್‌ನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ ಎಂದು ತಿಳಿಸಿದರು.

ಪರೀಕ್ಷೆ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಪಡಿಸಬೇಕು. ಕೈಗಳನ್ನು ಸ್ಕ್ಯಾನಿಟೈಸರ್‌ನಿಂದ ಶುದ್ದೀಕರಿಸಬೇಕು. ಮಾಸ್ಕ್ ಕಡ್ಡಾಯಗೊಳಿಸಿ ಪ್ರವೇಶ ನೀಡುಬೇಕು. ಈ ಪರೀಕ್ಷೆ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ ಸೆಂಟರಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಅವರು ಮಾತನಾಡಿ, ಪರೀಕ್ಷೆಯಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಎನ್. ವ್ಹಿ. ಹೊಸೂರ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಮತ್ತು ಎಸ್. ಎಸ್. ಎಲ್. ಸಿ. ಜಿಲ್ಲಾ ನೋಡಲ್ ಅಧಿಕಾರಿ ಮಂಜುನಾಥ ಗುಳೇದಗುಡ್ಡ, ,ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೋಳ್ಳಿ,‌ ಎನ್. ವಿ. ದೊಡಮನಿ, ಎಸ್. ಪಿ. ಬಾಡಂಗಡಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌