ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಲ್ಲದೇ, ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನ ವರ್ಣಿಸಲು ಶಬ್ದಗಳು ಸಾಲದು. ಕಳೆದ ಅನೇಕ ದಶಕಗಳಿಂದ ಯಡಿಯೂರಪ್ಪ ಕಷ್ಟಪಟ್ಟು ರಾಜ್ಯಾದ್ಯಂತ ಸಂಚರಿಸಿ ಜನರೊಂದಿಗೆ ಬೆರೆತು ಪಕ್ಷವನ್ನು ಬೆಳೆಸಿದ್ದಾರೆ. ಅವರ ಈ ಕಾರ್ಯ ಎಂದಿಗೂ ಚಿರಸ್ಥಾಯಿಯಾಗಿರುತ್ತದೆ ಎಂದು ಟ್ವೀಟ್ ನಲ್ಲಿ ಶ್ಲಾಘಿಸಿದ್ದಾರೆ.
ಇದೇ ವೇಳೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಸಂಸದೀಯ ಮತ್ತು ಆಡಳಿತಾತ್ಮಕವಾಗಿ ಸಾಕಷ್ಟು ಅನುಭವ ಹೊಂದಿರುವ ಬಸವರಾಜ ಬೊಮ್ಮಾಯಿ ಕರ್ನಾಟಕದಲ್ಲಿ ಉತ್ತಮ ಆಡಳಿತ ನೀಡುತ್ತಾರೆ ಎಂಬ ವಿಶ್ವಾಸವಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಶ್ಲಾಘಿಸಿದ್ದಾರೆ.