ವಿಜಯಪುರ: ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 34 ಜನ ಎಸ್ಸಿ ಮತ್ತು ಎಸ್ಟಿ ಅರ್ಹ ಫಲಾನುಭವಿಗಳಿಗೆ ತಲಾ ಒಂದು ಎಕರೆಯಂತೆ ನಿವೇಶನ ಹಂಚಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ, ಸುನೀಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಕೈಗಾರಿಕೆ ಪ್ರದೇಶದಲ್ಲಿ 307.27 ಎಕರೆ ಜಮೀನನ್ನು ಅಭಿವೃದ್ಧಿ ಪಡಿಸಿ ಅದರಲ್ಲಿ 69.59 ಎಕರೆ ಜಮೀನನ್ನು ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ತಲಾ ಒಂದು ಎಕರೆಯಂತೆ ಹಂಚಿಕೆ ಮಾಡುವಂತೆ ಸೂಚನೆ ನೀಡಿದರು.
ವಿಜಯಪುರ ನಗರದ ಮಹಾಲ ಬಾಗಾಯತ ಕೈಗಾರಿಕೆ ಪ್ರದೇಶದಲ್ಲಿ ಸಸಿಗಳನ್ನು ನೆಡಲು ಸಾಮಾಜಿಕ ಅರಣ್ಯ ಇಲಾಖೆಯಿಂದ ಸಸಿಗಳನ್ನು ನೀಡಬೇಕು. ಅಲ್ಲದೇ, ಕೈಗಾರಿಕೆ ಪ್ರದೇಶದಲ್ಲಿ ರಸ್ತೆ ಮತ್ತು ಒಳಚರಂಡಿ ದುರಸ್ತಿ ಹಾಗೂ ನೀರಿನ ಸರಬರಾಜು ಮಾಡುವಂತೆ ಅವರು ಸೂಚನೆ ನೀಡಿದರು.
ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಸಂಬಂಧಿತ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸ ತಿಳಿಸಿದರು, ಹಾಗೂ ಮೂಲಭೂತ ಸೌಕರ್ಯಗಳಾದ ರಸ್ತೆ,ಚರಂಡಿ,ನೀರಿನ ಸೌಕರ್ಯಗಳನ್ನು ಪೂರ್ಣಗೊಳಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಸ್. ಎಸ್. ಬಿರಾದಾರ, ವಿಜಯಪುರ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಎಸ್. ವಿ. ಪಾಟೀಲ, ಚೇಂಬರ್ ಆಫ್ ಕಾಮರ್ಸ ಇಂಡಸ್ಟ್ರಿಯಲ್ ಆ್ಯಂಡ್ ಅಗ್ರಿಕಲ್ಚರ್ ಅಧ್ಯಕ್ಷ ಡಿ. ಎಸ್. ಗುಡ್ಡೊಡಗಿ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ ಬಿರಾದಾರ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.