ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಿ ರಾಜ್ಯಕ್ಕೆಸಂಬಂಧಿಸಿದ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ, ಕೊರೊನಾ ನಿಯಂತ್ರಣ ಮತ್ತು ನಾನಾ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿಯವರು ಸಿಎಂಗೆ ಸಲಹೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಭರವಸೆ ನೀಡಿದರು.
ಇದಕ್ಕೂ ಮುನ್ನ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಹೊಸದಾಗಿ ಸೃಷ್ಠಿಸಲಾಗಿರುವ ಸಹಕಾರ ಸಚಿವಾಲಯದ ಹೊಣೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ರಾಜ್ಯದ ಪ್ರವಾಹ ಪರಿಸ್ಥಿತಿ, ಕೊರೊನಾ ನಿರ್ವಹಣೆ ಸೇರಿದಂತೆ ನಾನಾ ವಿಷಯಗಳ ಕುರಿತು ಮಾಹಿತಿ ನೀಡಿದರು. ಇದು ಪರೀಕ್ಷೆಯ ಸಮಯವೆಂದ ಗೃಹ ಸಚಿವರಿಗೆ ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವುದಾಗಿ ಸಿಎಂ ಭರವಸೆ ನೀಡಿದರು.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ಹಾಗೂ ಕೃಷ್ಣಾ ಮೇಲ್ದಂಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕುರಿತು ಸಹ ಚರ್ಚೆ ನಡೆಸಲಾಯಿತು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥಸಿಂಗ, ಸಚಿವ ಪ್ರಲ್ಹಾದ ಜೋಷಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಅನುರಾಗ ಠಾಕೂರ ಮುಂತಾದವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನೂತನ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಈ ಗಣ್ಯರು ರಾಜ್ಯದ ಅಭಿವೃದ್ದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಮಧ್ಯಾಹ್ನ ರಾಜ್ಯದ ಕೇಂದ್ರ ಸಚಿವರು ಹಾಗೂ ಸಂಸತ ಸದಸ್ಯರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಯವರು ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ಹಾಗೂ ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಹಕಾರ ನೀಡುವಂತೆ ಕೋರಿದರು. ಈ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಂಸದರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ತಿಳಿಸಿದರು. ನಾಡಿನ ನೆಲ, ಜಲದ ರಕ್ಷಣೆಯಲ್ಲಿ ಸಂಸದರು ಸಹಕರಿಸುವಂತೆ ಮನವಿ ಮಾಡಿದರು.
ತಮ್ಮ ದೆಹಲಿ ಭೇಟಿಯ ವಿವರಗಳನ್ನು ಮಾಧ್ಯಮದವರಿಗೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಆರ್ಥಿಕ ಸುಸ್ಥಿರತೆ ಕಾಪಾಡುವುದು, ಪ್ರವಾಹ ಮತ್ತು ಕೊರೊನಾ ನಿಯಂತ್ರಣ ಆದ್ಯತೆಯ ವಿಷಯಗಳಾಗಿವೆ ಎಂದು ತಿಳಿಸಿದರು.