ವಿಜಯಪುರ: ಸಿಐಡಿ ಎಡಿಜಿಪಿ ಉಮೇಶ ಕುಮಾರ ಮಂಗಳವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಭೀಮಾ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಜೆ ವಿಜಯಪುರಕ್ಕೆ ಆಗಮಿಸಿದ ಅವರು ತಡರಾತ್ರಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಭೀಮಾ ತೀರಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರತಿನಿತ್ಯ ಸಾವಿರಾರು ಜನರು ಸಂಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಚ್ರದಿಂದ ರಾಜ್ಯಕ್ಕೆ ಬರುವವವರ ಮೇಲೆ ನಿಗಾ ವಹಿಸಲಾಗಿದ್ದು, ಅವರನ್ನು ಒಳಗೆ ಪ್ರವೇಶ ನೀಡಲು ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಎಡಿಜಿಪಿ ಉಮೇಶ ಕುಮಾರ ಇಂಡಿ ತಾಲೂಕಿನ ಧೂಳಖೇಡ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿದ್ದ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿಯ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಿದ ಅವರು, ನೆರೆ ರಾಜ್ಯದಿಂದ ಆಗಮಿಸುವವರ ಬಗ್ಗೆ ನಿಗಾ ವಹಿಸಿ ಅವರ ಆರೋಗ್ಯ ತಪಾಸಣೆ ನಡೆಸಲು ಸೂಚನೆ ನೀಡಿದರು. ಅಲ್ಲದೇ, ರಾತ್ರಿಗಿಂತ ಹಗಲು ಹೊತ್ತಿನಲ್ಲಿ ಜನರ ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲರ ತಪಾಸಣೆ ನಡೆಸುವಂತೆ ಸೂಚನೆ ನೀಡಿದರು.
ತಪಾಸಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮತ್ತು ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಅವಕಾಶ ನೀಡಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಚೆಕ್ ಪೋಸ್ಟ್ ಅಧಿಕಾರಿಗಳು ಮತ್ತು ಸಿಬ್ಬಂದಿ ರಾತ್ರಿ ವೇಳೆ ವಿದ್ಯುತ್ ಬೆಳಕಿನ ಸೌಲಭ್ಯವನ್ನು ಹೆಚ್ಚಿಸಲಾಗಿದೆ. ಇಲ್ಲಿನ ಸಿಬ್ಬಂದಿ ಕಟ್ಟುನಿಟ್ಟಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ, ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ, ಚಡಚಣ ಸಿಪಿಐ ಸಾಹೇಬಗೌಡ ಪಾಟೀಲ, ಸುನೀಲ ಕಾಂಬಳೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.