ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು: ಕೊರೊನಾ ಪಾಸಿಟಿವಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆ ಕಂಡುಬರುತ್ತಿರುವ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಸೋಂಕು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರಕಾರ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರ ನಿರ್ವಹಣೆ, ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗುವ, ಆಸ್ಪತ್ರೆಗಳಲ್ಲಿ ಕೋವಿಡ್ ನಿರ್ವಹಣೆಗಾಗಿ ಇರುವ ಸೌಲಭ್ಯಗಳು, ಆಂಪೋಟೇರಸಿನ್, ಮುಖ್ಯವಾಗಿ ಜಿಲ್ಲೆಗೆ ಅಗತ್ಯವಿರುವ ಕೋವಿಡ್ ವ್ಯಾಕ್ಸಿನ್ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮಂಗಳೂರಿನಲ್ಲಿ ಕೊವೀಡ್ ಪರಿಶೀಲನಾ ಸಭೆಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ತಾಲೂಕುಗಳು ಮತ್ತು ಗ್ರಾಮಗಳ 10 ಕಿ, ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಜನರಿಗೆ ಆದ್ಯತೆಯ ಮೇರೆಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗುವುದು, ಆದ ಕಾರಣ ಈ ಭಾಗಕ್ಕೆ ಹೆಚ್ಚಿನ ವ್ಯಕ್ಸಿನ್ ಪೂರೈಕೆಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗುವುದು. ರಾಜ್ಯಕ್ಕೆ ಪ್ರತಿ ತಿಂಗಳು 60-65 ಲಕ್ಷ ವ್ಯಾಕ್ಸಿನ್ ಬರುತ್ತಿದೆ. ಕೇಂದ್ರದೊಂದಿಗೆ ಚರ್ಚಿಸಿ ಅದನ್ನು ಒಂದರಿಂದ ಒಂದೂವರೆ ಕೋಟಿಗೆ ಹೆಚ್ಚಿಸಿ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ವ್ಯಾಕ್ಸಿನ್ ಸರಬರಾಜು ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಎಚ್ಚರಿಕೆಯ ಕ್ರಮ ವಹಿಸಬೇಕು. ಗಡಿಯೊಳಗೆ ಪ್ರವೇಶಿಸುವವರಿಗೆ ಆರ್ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿ ನಡೆಸಬೇಕು. ಬರುವವರು ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು, ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು, ಹೆಚ್ಚಿನ ಪೊಲೀಸರೊಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಿ ಪೊಲಿಸ್ ಆಯುಕ್ತರು ಮತ್ತು ಎಸ್ಪಿ ಈ ಕುರಿತು ಹೆಚ್ಚಿನ ಗಮನ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಮಾತನಾಡಿ, ಸಂಭಾವ್ಯ ಕೋವಿಡ್ 3 ನೇ ಅಲೆ ಪ್ರಾರಂಭವಾಗುವ ಮೊದಲೇ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ, ಈ ನಿಟ್ಟಿಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಇಲ್ಲದಂತೆ ನೋಡಿಕೊಳ್ಳುವುದರ ಜೊತೆಗೆ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಕೇರ್ ಸೆಂಟರ್ಗಳು ಸೂಕ್ತವಾಗಿ ನಿರ್ವಹಣೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳೂರಿನಲ್ಲಿ ಕೊವೀಡ್ ಪರಿಶೀಲನಾ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಗಡಿ ಭಾಗದಿಂದ ಬರುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿದಿನವೂ ಕೋವಿಡ್ ತಪಾಸಣೆಯನ್ನು ಹೆಚ್ಚು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕತಿ ಸಚಿವ ವಿ. ಸುನೀಲ ಕುಮಾರ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಸಿಎಂ ನಡೆಸಿದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಪಾಲ್ಗೋಂಡಿದ್ದ ಅಧಿಕಾರಿಗಳು, ಜನಪ್ರತಿನಿಧಿಗಳು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು. ಟಿ. ಖಾದರ, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ, ಬೆಳ್ತಂಗಡಿ ಶಾಸಕ ಹರೀಶ ಪೂಂಜಾ, ಬಂಟ್ವಾಳ ಶಾಸಕ ರಾಜೇಶ ನಾಯ್ಕ ಯು, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡಬಿದ್ರೆ ಶಾಸಕ ಉಮಾನಾಥ ಎ. ಕೋಟ್ಯಾನ, ವಿಧಾನ ಪರಿಷತ ಶಾಸಕ ಎಸ್. ಎಲ್. ಭೋಜೇಗೌಡ ಸಭೆಯಲ್ಲಿ ಮಾತನಾಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಿತಿನ ಕುಮಾರ, ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ ರೈ ಬೋಲಿಯಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ, ಉಪಮೇಯರ ಸುಮಂಗಲಾ ರಾವ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌