ವಿಜಯಪುರ: ಆ. 19 ರಿಂದ ಸೆ. 3ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಬಾಹ್ಯ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19 ಮಾರ್ಗಸೂಚಿಗಳ ಅನ್ವಯ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಬಾಹ್ಯ ಮತ್ತು ರೆಗ್ಯೂಲರ್ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಿದ್ದತಾ ಸಭೆ ನಡೆಸಿದ ಅವರು, ಕೋವಿಡ್- 19 ಮಾರ್ಗಸೂಚಿಯ ಅನ್ವಯ ಪರೀಕ್ಷೆಗಳನ್ನು ನಡೆಸಲು ಸಿದ್ದತೆ ಮಾಡಿಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ ಧರಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಬಾಹ್ಯ ವಾರ್ಷಿಕ ಪರೀಕ್ಷೆಯನ್ನು ಐದು ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ವಿಜಯಪುರ ನಗರ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ಸಿಂದಗಿ ಹಾಗೂ ಇಂಡಿ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 777 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಪರೀಕ್ಷೆ ಕೇಂದ್ರಗಳನ್ನು ಕಡ್ಡಾಯವಾಗಿ ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಲು ಸೂಚಿಸಿದ ಅವರು, ಪರೀಕ್ಷೆ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್-19 ಲಕ್ಷಣಗಳು ಕಂಡು ಬಂದರೆ ಅಂಥ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಪರೀಕ್ಷೆಯನ್ನು ನಕಲು ಮುಕ್ತವಾಗಿ ನಡೆಸಬೇಕು. ಐಐಟಿ. ಮಾದರಿಯಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಗಳು ನಡೆಯಬೇಕು. ಕೇಂದ್ರದ ಮುಖ್ಯ ಅಧೀಕ್ಷಕರು ಮತ್ತು ಸಹ ಮುಖ್ಯ ಅಧೀಕ್ಷಕರು ಜಾಗೃತೆಯಿಂದ ಕಾರ್ಯ ನಿರ್ವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಉತ್ತರ ಪತ್ರಿಕೆ, ಪ್ರಶ್ನೆ ಪತ್ರಿಕೆ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಎಲ್ಲಾ ಕೊಠಡಿಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪೆನ್ ಡ್ರೈವ್‌ದಲ್ಲಿ ಶೇಖರಿಸಿಕೊಂಡು ಪ್ರತಿ ಪರೀಕ್ಷೆ ಮುಗಿದ ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಹಾಗೂ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು. ವಿಜಯಪುರ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜನ್ನು ಕೋವಿಡ್ ಕೇರ್ ಸೆಂಟರನ್ನಾಗಿ ಮಾಡಲಾಗಿದೆ ಎಂದು ರಮೇಶ ಕಳಸದ ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.