ಬೆಂಗಳೂರು: ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಸರಕಾರ ಆದೇಶ ಹೊರಡಿಸಿದೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದವರಾಗಿರುವ ಗುರುಲಿಂಗಸ್ವಾಮಿ ಹೊಳಿಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಕನ್ನಡದ ರಾಜ್ಯ ಮಟ್ಟದ ದಿನಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿಯೂ 1998 ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಹಿರಿಯ ಪತ್ರಕರ್ತರಾಗಿದ್ದಾರೆ.
ಇದಕ್ಕೂ ಮುಂಚೆ ಗುರುಲಿಂಗಸ್ವಾಮಿ ಹೊಳಿಮಠ ಅವರು, ಈ ಹಿಂದೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿದ್ದರು. ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ಸಿಎಂ ತಮ್ಮ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಬಸವ ನಾಡು ಗುರುಲಿಂಗಸ್ವಾಮಿ ಹೊಳಿಮಠ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ.