ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಅರುಣ ಶಹಾಪುರ ಬೆಂಗಳೂರಿನಲ್ಲಿ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಮತ್ತು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಐಟಿ ಮತ್ತು ಬಿಟಿ ಸಚಿವ ಡಾ. ಅಶ್ವತ್ಥನಾರಾಯಣ ಅರವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ಐಟಿಐ ಶಿಕ್ಷಣ ಇಲಾಖೆಗಳಲ್ಲಿನ ಅತೀ ಪ್ರಮುಖವಾದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿದರು.
ಅಲ್ಲದೇ, ಈ ನಿಟ್ಟಿನಲ್ಲಿ ಶಿಕ್ಷಕರ ಹಾಗೂ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರುಗಳ ಜೊತೆ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಭೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ಅರುಣ ಶಹಾಪುರ ಅವರ ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.