ಬಹುಗ್ರಾಮ ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಉದ್ದೇಶದಿಂದ ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇದು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಪ್ರತಿ 15 ದಿನಕ್ಕೊಮ್ಮೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿ ತಿಂಗಳು ತಾವೇ ಖುದ್ದು ಪ್ರಗತಿ ಪರಿಶೀಲನೆ ಮಾಡುವುದಾಗಿ ತಿಳಿಸಿದರು.


ಮೇಲ್ಮೈ ಜಲ ಲಮೂಲ ಇಲ್ಲದ ಜಿಲ್ಲೆಗಳಿಗೆ ನೀರು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. 2022-23ನೇ ವರ್ಷದ ಯೋಜನೆ ರೂಪಿಸಿ, ಅನುಮೋದನೆ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸಕ್ತ ವರ್ಷದ ಎಲ್ಲ ಡಿಪಿಆರ್ ಗಳ ಅನುಮೋದನೆ ಪ್ರಕ್ರಿಯೆ ಅಕ್ಟೋಬರ್ ಒಳಗೆ ಪೂರ್ಣಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು. ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಅನುಮೋದನೆಯಲ್ಲಿನ ತೊಡಕುಗಳ ನಿವಾರಣೆಗೆ ತಾವೇ ಖುದ್ದು ಕ್ರಮ ವಹಿಸುವ ಭರವಸೆ ನೀಡಿದ ಸಿಎಂ, ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌