ಜಲವಿವಾದ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಎಲ್ಲ ಜಲ ವಿವಾದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ವಿಶೇಷ ರಜೆ ಅರ್ಜಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ. ತಮಿಳುನಾಡು ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ಚರ್ಚೆ ನಡೆಸಲಾಗಿದೆ. ಮೇಕೆದಾಟು ಯೋಜನೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ನಮ್ಮ ನಿಲುವನ್ನು ಸ್ಪಷ್ಟಪಡಿಸುವ ಕುರಿತು ಮತ್ತು ತಮಿಳುನಾಡು- ಮಧುರೈ ನ್ಯಾಯಾಲಯದಲ್ಲಿ ಪ್ರಕರಣವೊಂದು ದಾಖಲಾಗಿದೆ. ಈ ಪ್ರಕರಣ ಮಧುರೈ ವ್ಯಾಪ್ತಿಗೆ ಒಳಪಡದಿರುವುದರಿಂದ ಪ್ರಕರಣವನ್ನು ಕೈಬಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ. ಕೆ. ಸುಧಾಕರ, ಹಾವೇರಿ ಸಂಸದ ಶಿವಕುಮಾರ ಉದಾಸಿ ಮುಂತಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌