ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ವಾತಂತ್ರ್ಯ ಬಂದ ನಂತರ ಅಸಂಘಟಿತ ಕಾರ್ಮಿಕರ ನೋಂದಣಿ ಮೊದಲ ಬಾರಿ ನಡೆಯುತ್ತಿದೆ. ಅವರನ್ನು ಗುರುತಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಜೀವನದ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು ಎಂದು ಆಶಿಸಿದರು.

ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಸಿಎೞ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಕೂಲಿ ಕಾರ್ಮಿಕ ಇರಲಿ ಅಥವಾ ರೈತ ಕಾರ್ಮಿಕರೇ ಇರಲಿ. ಅವರ ಶ್ರಮಕ್ಕೆ ಪ್ರತಿಫಲ ಸಿಗಬೇಕು. ಒಂದು ದೇಶದ ಸಂಪತ್ತು ಸೃಷ್ಟಿ ಕೇವಲ ಹಣದಿಂದ ಸಾಧ್ಯವಿಲ್ಲ. ಹಣ ಬಳಕೆ ಮಾಡಿ, ಶ್ರಮ ವಹಿಸಿ, ಭೌತಿಕ ಸೌಲಭ್ಯ ಸೃಷ್ಟಿಸಬೇಕಾದರೆ ಕಾರ್ಮಿಕರೇ ಬೇಕು. ಅಸಂಘಟಿತ ಕಾರ್ಮಿಕರೇ ದೇಶದ ಶಕ್ತಿ. ಇವರು ಆರ್ಥಿಕತೆಯ ಪಿರಮಿಡ್ ನ ತಳಹದಿ. ಈ ತಳಹದಿ ಭದ್ರವಾಗಿದ್ದರೆ ಮಾತ್ರ ಆರ್ಥಿಕತೆ ಉತ್ತಮವಾಗಿರಲು ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು.

ರಾಜ್ಯಕ್ಕೆ 1.80 ಕೋಟಿ ಕಾರ್ಮಿಕರ ನೋಂದಣಿಯ ಗುರಿ ನಿಗದಿ ಪಡಿಸಲಾಗಿದೆ. ನಿಜವಾದ ಅಸಂಘಟಿತ ಕಾರ್ಮಿಕರ ನೋಂದಣಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ನೋಂದಣಿಯಿಂದ ಕಾರ್ಮಿಕರಿಗೆ ಇರುವ ಅನುಕೂಲಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೀವ ಚಾವ್ಲಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಮ ಪಾಷಾ ಮತ್ತು ಇತರರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌