ಬೆಂಗಳೂರು: ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಕೆಲವು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್-19 ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿತ್ತು. ಇದೀಗ ಕೆಲವು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಸರಕಾರ ವೀಕೆಂಡ್ ಕರ್ಫ್ಯೂ ಹಿಂಪಡೆದಿದೆ.
ಮಹಾರಾಷ್ಟ್ರದ ಗಡಿಯಲ್ಲಿರುವ ವಿಜಯಪುರ, ಬೆಳಗಾವಿ, ಬೀದರ, ಕಲಬುರಗಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ವಿಧಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಆದರೆ, ದಕ್ಷಿಣ ಕನ್ನಡ, ಕೊಡಗು, ಉಡುಪಿ ಮತ್ತು ಹಾಸನ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ.
ಈ ಸಭೆಯಲ್ಲಿ ಇನ್ನೂ ಹಲವಾರು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವೀಕೆಂಡ್ ಕರ್ಫ್ಯೂ ಹಿಂಪಡೆದಿರುವ ಕುರಿತು ಸರಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ, ಎಸ್. ಟಿ. ಸೋಮಶೇಖರ, ಬಿ. ಸಿ. ನಾಗೇಶ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ, ತಜ್ಞ ವೈದರಾದ ಡಾ. ಸುದರ್ಶನ, ಡಾ. ಸಿ. ಎನ್. ಮಂಜುನಾಥ, ಡಾ. ದೇವಿಶೆಟ್ಟಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.