ವಿಜಯಪುರ: ಸರಕಾರದ ಆದೇಶದಂತೆ ವಿಜಯಪುರ ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಸರಳ, ಶಾಂತಿಯುತ ಮತ್ತು ಭಕ್ತಿಪೂರ್ವಕವಾಗಿ ಆಚರಿಸುವ ನಿಟ್ಟಿನಲ್ಲಿ ಗಣೇಶೋತ್ಸವವನ್ನು ಐದು ದಿನಗಳಿಗೆ ಮಾತ್ರ ಸೀಮಿತ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಶಾಂತತೆ ಹಾಗೂ ಕೋವಿಡ್ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವೇಳೆ ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನೂ ಆಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಈ ಬಾರಿಯೂ ಪಿಓಪಿ ಗಣೇಶ್ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿದ್ದು ಸಾರ್ವಜನಿಕರು ಸಹಕರಿಸಬೇಕು. ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳಗಳಲ್ಲಿ ಅನಗತ್ಯ ಜನಸಂದಣಿ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಕೋವಿಡ್-19 ಮಾರ್ಗಸೂಚಿಗಳನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ, ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಂತಮ್ಮ ಮನೆಗಳಲ್ಲಿ ಅಥವಾ ಸರಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು ಎಂದು ಅವರು ಸೂಚನೆ ನೀಡಿದರು.
ಸರಕಾರದ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲು ಅವಕಾಶ ಕಲ್ಪಿಸಲಾಗಿದ್ದು, ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು. ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್ ಮತ್ತು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಒಮ್ಮೆಲೇ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ಗಣೇಶ ಆಚರಣೆಯ ಆಯೋಜಕರು ಕೋವಿಡ್-19 ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಆಯೋಜಿಸಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿಜೆ ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವಣಿಗೆಯನ್ನು ಹೊರಡಿಸಬಾರದು. ಅಲ್ಲದೇ, ಸರಕಾರ ಸೂಚಿಸಿರುವ ಎಲ್ಲ 17 ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯರಪುರ ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಿಶಿದ್ಧಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.