ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆಗೆ ಶಿಲ್ಯಾನ್ಯಾಸ ನೆರವೇರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಪಿ ಎಲ್ ಐ ಯೋಜನೆಯಡಿ ಕೇಂದ್ರ ಸರಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕರ್ಸಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ ಗಳನ್ನು ಮಾಡಲಾಗುವುದು. ರಾಜ್ಯಕ್ಕೆ ಕನಿಷ್ಟ ಮೂರು ಟೆಕ್ಸಟೈಲ್ ಪಾರ್ಕ್ ಗಳನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ರೂ. 125 ಕೋ. ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಡೀ ರಾಜ್ಯದಲ್ಲಿ ಈ ಯೋಜನೆಯಡಿ ಒಟ್ಟು ರೂ. 1500 ಕೋ. ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯೊಂದಿಗೆ ಈ ಯೋಜನೆಯೂ ಸೇರಿ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸಿಎಂ ತಿಳಿಸಿದರು.

ಅಮೃತ ಗ್ರಾಮ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಗ್ರಾಮಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ರೂ. 25 ಲಕ್ಷ ಹಣವನ್ನು ಹೆಚ್ಚುವರಿಯಾಗಿ ನೀಡುವ ಯೋಜನೆಯಿದೆ ಎಂದು ತಿಳಿಸಿದ ಅವರು, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ರೇಷ್ಮೆ ಕೃಷಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕರ್ನಾಟಕದ ರೇಷ್ಮೆ ಬೆಳೆ ಶ್ರೇಷ್ಠ ಗುಣಮಟ್ಟದ್ದಾಗಿದ್ದು, ವಿದೇಶದಿಂದ ಆಮದಾಗುವ ರೇಷ್ಮೆಯ ಗುಣಮಟ್ಟಕ್ಕೆ ಸರಿಸಮಾನವಾಗಿದೆ. ರೇಷ್ಮೆ ಬೆಳೆ ಪ್ರಮುಖವಾಗಿರುವ ಎಂಟ್ಹತ್ತು ಜಿಲ್ಲೆಗಳಲ್ಲಿ ರೇಷ್ಮೆ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಮಾರಂಭದಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಲೋಕಸಭೆ ಸದಸ್ಯ ಜಿ. ಎಂ. ಸಿದ್ಧೇಶ್ವರ, ಶಾಸಕ ಎಸ್. ಎ. ರವೀಂದ್ರನಾಥ ಮುಂತಾದವರು ಉಪಸ್ಥಿತರಿದ್ದರು.

ದಾವಣಗೆರೆ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

Leave a Reply

ಹೊಸ ಪೋಸ್ಟ್‌