ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ರೂ. 3000 ಕೋ. ವಿಶೇಷ ಅನುದಾನ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ನಲ್ಲಿ 3 ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ ಒದಗಿಸಲಾಗುವುದು, ಕಿತ್ತೂರು ಕರ್ನಾಟಕದ ಅಭಿವೃದ್ಧಿ ಹಾಗೂ ಹಳೆಯ ಮೈಸೂರು ಭಾಗದ ನೀರಾವರಿ  ಯೋಜನೆಗಳನ್ನು ಪೂರ್ಣಗೊಳಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಆಯೋಜಿಸಿದ್ದ 66 ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಮತ್ತು ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ತಮ್ಮ ಸರ್ಕಾರ ಕೆಲಸ ಮಾಡಲಿದೆ.  ಕರ್ನಾಟಕ ರಾಜ್ಯೋತ್ಸವ ಕನ್ನಡಿಗರ ಜನೋತ್ಸವವಾಗಬೇಕು. ಇಡೀ ರಾಜ್ಯದ ಅಭಿವೃದ್ಧಿ ಸಾಧ್ಯವಾದರೆ ಜನೋತ್ಸವ ಕಾಣಬಹುದು. ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಕನ್ನಡವನ್ನು ಎಲ್ಲಾ ಆಯಾಮಗಳಲ್ಲಿ ಬಳಕೆ ಮಾಡುವ ಮೂಲಕ ಕನ್ನಡಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ ಎಂದ ಅವರು ಈ ನಿಟ್ಟಿನಲ್ಲಿ ಇಂಜಿನಿಯರಿಂಗ್ ನಂತಹ ತಾಂತ್ರಿಕ ಶಿಕ್ಷಣವನ್ನು ಸಂಪೂರ್ಣ ಕನ್ನಡದಲ್ಲೇ ನೀಡಲು ಸರ್ಕಾರ ಮುಂದಡಿ ಇಟ್ಟಿದೆ. ಈ ವಿಷಯದಲ್ಲಿ ಸರಕಾರ ನಿಲುವು ಹೊಂದಿದೆ.  ಕನ್ನಡಕ್ಕೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಅದನ್ನು ಕುಗ್ಗಿಸಲು ಅಥವಾ ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಸಿಂಧೂ ನಾಗರಿಕತೆಗೂ ಮೊದಲೇ ಕನ್ನಡ ಬಳಕೆಯಲ್ಲಿದ್ದ ಭಾಷೆ. ಸಹಸ್ರಾರು ವರ್ಷಗಳಿಂದ ಬಳಕೆಯಲ್ಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕನ್ನಡಿಗರ ಮಕ್ಕಳಿಗೆ ಉದ್ಯೋಗ ನೀಡುವ ಶಕ್ತಿ ತುಂಬಬೇಕಿದೆ ಆಗ ಮಾತ್ರ ಕನ್ನಡ, ಕನ್ನಡಿಗರ ಶಕ್ತಿ ಹೆಚ್ಚುತ್ತದೆ. ಅದಕ್ಕಾಗಿ ಸರ್ಕಾರ ಕೈಗಾರಿಕಾ ತರಬೇತಿ ಕೇಂದ್ರಗಳು ಹಾಗೂ ಪಾಲಿಟೆಕ್ನಿಕ್ ಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಿದೆ.  ರಾಜ್ಯದಲ್ಲಿ ಆರಂಭವಾಗುವ ಉದ್ದಿಮೆಗಳಲ್ಲಿ ಶೇ.75ರಷ್ಟು ಕೌಶಲ್ಯ ವಲಯದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ. ಸಿ. ನಾಗೇಶ, ಶಾಸಕ ರಿಜ್ವಾನ್ ಆರ್ಷದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌