ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31085 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿರುವುದು ಸ್ವತಃ ಬಿಜೆಪಿ ನಾಯಕರಿಗೆ ಅಚ್ಚರಿ ಮೂಡಿಸಿದ್ದು, ನಿರೀಕ್ಷೆಗೂ ಮೀರಿ ಮತಗಳು ಬರಲು ಕಾರಣವೇನು ಎಂಬುದನ್ನು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಬಿಚ್ಚಿಟ್ಟಿದ್ದಾರೆ.
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಕ್ಜಿದೆ. ಸಿಂದಗಿ ಮತದಾರರು, ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆಗಳು. ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಸಂಘಟಿತರಾಗಿ ಕೆಲಸ ಮಾಡಿದ್ದಾರೆ. ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ, ಸಿ. ಸಿ. ಪಾಟೀಲ, ಶಶಿಕಲಾ ಜೊಲ್ಲೆ, ಲಕ್ಷ್ಮಣ ಸವದಿ ಪ್ರಚಾರ ಕೈಗೊಂಡಿದ್ದಾರೆ. ಪ್ರತಿಯೊಬ್ನ ಸಚಿವರಿಗೆ ತಲಾ ಎರಡು ಜಿಲ್ಲಾ ಪಂಚಾಯಿತಿ ಹಂಚಿಕೆ. ಸಂಘಟಿತ ಪ್ರಯತ್ನದ ಫಲ ಭರ್ಜರಿ ಗೆಲುವಿಗೆ ಕಾರಣವಾಗಿದೆ. ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ, ಭೂತ್ ಸಮಿತಿ, ಪೇಜ್ ಪ್ರಮುಖರ ಮೂಲಕ ಮತದಾರರನ್ನು ತಲುಪಿದೆವು. ಇದು ಉತ್ತಮ ಫಲಿತಾಂಶಕ್ಕೆ ಕಾರಣ. ಬಿಜೆಪಿ ಅಭ್ಯರ್ಥಿ ಈ ಹಿಂದೆ ಉತ್ತಮ ಕೆಲಸ ಮಾಡಿದ್ದರು ಚುನಾವಣೆಯಲ್ಲಿ ಸೋತರೂ ಮನೆಯಲ್ಲಿ ಕುಳಿತುಕೊಳ್ಳದೇ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ಇದೂ ಕೂಡ ಗೆಲುವಿಗೆ ಸಹಕಾರಿ ಆಗಿದೆ ಎಂದು ತಿಳಿಸಿದರು. .
ಸರಕಾರದಿಂದ ಸಿಂದಗಿ ಮತಕ್ಷೇತ್ರಕ್ಕೆ ಆಗಬೇಕಿರುವ ಕೆಲಸಗಳನ್ನು ಮಾಡಿಸುತ್ತೇವೆ. ಈಗಾಗಲೇ ಈ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಈ ಮಾಹಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಬಂಧಿಸಿದ ಸಚಿವರ ಗಮನಕ್ಕೆ ತರುತ್ತೇವೆ ಎಂದು ಅವರು ತಿಳಿಸಿದರು.
ಸಿಂದಗಿಯಲ್ಲಿ ಮತರಾದರರು ಭಾರಿ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದರಿಂದ ಚುನಾವಣೆಯಲ್ಲಿ ಪ್ರಚಾರ ಮಾಡಿ ಕಾರ್ಯತಂತ್ರ ರೂಪಿಸಿದ ಬಿಜೆಪಿಯ ಎಲ್ಲ ನಾಯಕರನ್ನು ಕರೆಯಿಸಿ ಅತೀ ಶೀಘ್ರದಲ್ಲಿ ಸಿಂದಗಿಯಲ್ಲಿ ವಿಜಯೋತ್ಸವ ಆಚರಿಸಲಾಗುವುದು ಎಂದು ತಿಳಿಸಿದ ಆರ್. ಎಸ್. ಪಾಟೀಲ ಕೂಚಬಾಳ, ತಾವು ಬಿಜೆಪಿ ಜಿಲ್ಲಾಧ್ಯಕ್ಷರಾದ ನಂತರ ಇದು ಮೊದಲ ಗೆಲುವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಇದೇ ವೇಳೆ, ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಮಾಡಿರುವ ಆರೋಪದ ಕುರಿತು ಕಿಡಿ ಕಾರಿದ ಅವರು, ಸಿದ್ಧರಾಮಯ್ಯ ಈ ಹಿಂದೆ ಸ್ವಾರ್ಥಕ್ಕಾಗಿ ಅಹಿಂದ ರಚಿಸಿ ಬಳಿಸಿಕೊಂಡರು. ನಂತರ ಅಹಿಂದ ಸಮುದಾಗಳನ್ನು ಕೈ ಬಿಟ್ಟರು. ಈಗ ಸಿದ್ಧರಾಮಯ್ಯ ದಲಿತ ಸಮುದಾಯದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಮುಂಬರುವ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಎರಡೂ ಜಿಲ್ಲೆಗಳಿಂದ ಏಳೆಂಟು ಜನ ಆಕಾಂಕ್ಷಿಗಳಿದ್ದಾರೆ. ಅವರ ಆಯ್ಕೆಯ ಕುರಿತು ಬಿಜೆಪಿ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವ ಕುರಿತು ಪ್ರತಿಕ್ರಿಯೆ ನೀಡಿದ ಆರ್. ಎಸ್. ಪಾಟೀಲ ಕೂಚಬಾಳ, ಸರಕಾರ ಈ ನಿಟ್ಟಿನಲ್ಲಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ವಿಜುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ವಿಜಯ ಜೋಶಿ ಮತ್ತಿತರರು ಉಪಸ್ಥಿತರಿದ್ದರು.