ವಿಪ ಚುನಾವಣೆ: ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ನೀಡಲು ಶಂಕರಗೌಡ ಬಿರಾದಾರ ಆಗ್ರಹ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ‌ ವಿಜಯಪುರ ಕ್ಷೇತ್ರದಿಂದ ಲಗಾಯಿತ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭೆ ರಾಷ್ಟ್ರೀಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಸ್ವಾಭಿಮಾನಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ವಿಧಾನ ಪರಿಷತ್ ಚುನಾವಣೆಗೆ ಸ್ಥಳೀಯರನ್ನೇ ಬೆಂಬಲಿಸಬೇಕು. ಅಲ್ಲದೇ, ಲಿಂಗಾಯತ ಪಂಚಮಸಾಲಿ ಸಮಾಜದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಅಸ್ತಿತ್ವಕ್ಕೆ ಬಂದಾಗಿನಿಂದ ವಿಜಯಪುರ ಜಿಲ್ಲೆಗೆ ಎರಡೂ ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡುತ್ತ ಬಂದಿವೆ. ಈ ಅನ್ಯಾಯವನ್ನು ಪ್ರತಿಭಟಿಸಿ ಮಾಜಿ ಕೇಂದ್ರ ಸಚಿವ ಮತ್ತು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು 2016ರಲ್ಲಿ ಜಿಲ್ಲೆಯ ಸ್ವಾಭಿಮಾನದ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಅವರಿಂದ ತೆರವಾಗಿರುವ ಸ್ಥಾನವನ್ನು ಮತ್ತೆ ವಿಜಯಪುರ ಜಿಲ್ಲೆಯ ಜಿಲ್ಲೆಯವರಾಗಿರಬೇಕು ಎಂಬ ಉದ್ದೇಶದಿಂದ ಸುನಿಲಗೌಡ ಪಾಟೀಲ ಅವರನ್ನು ಜನತೆ ಗೆಲ್ಲಿಸಿದ್ದರು. ಆದ್ದರಿಂದ ಎರಡೂ ಪಕ್ಷಗಳು ಬಾಗಲಕೋಟ ಜಿಲ್ಲೆಗೆ ಮಾತ್ರ ಆದ್ಯತೆ ನೀಡುತ್ತಿವೆ. ‌ವಿಜಯಪುರ ಜಿಲ್ಲೆಯನ್ನು ಕಡೆಗಣಿಸಿವೆ ಎಂದು ಆರೋಪಿಸಿದರು.

ಈ ಬಾರಿ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ಅಭ್ಯರ್ಥಿಗೆ ಆದ್ಯತೆ ನೀಡಬೇಕು. ಅದರಲ್ಲೂ ವಿಶೇಷವಾಗಿ ಲಿಂಗಾಯತ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ಕೊಟ್ಟು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು. ಒಂದು ವೇಳೆ ಎರಡೂ ರಾಷ್ಟ್ರೀಯ ಪಕ್ಷಗಳು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದರೆ ನಾವು ನಮ್ಮ ಸಮುದಾಯದಿಂದ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸುತ್ತೇವೆ. ಇನ್ನೂ ಕಾಲ ಮಿಂಚಿಲ್ಲ. ಕೂಡಲೇ ಎರಡೂ ರಾಷ್ಟ್ರೀಯ ಪಕ್ಷಗಳು ಆತ್ಮಾವಲೋಕನ ಮಾಡಿಕೊಂಡು ನಮ್ಮ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಅವಕಾಶ ಕೊಡಬೇಕು ಎಂದು ಶಂಕರಗೌಡ ಬಿರಾದಾರ ಆಗ್ರಹಿಸಿದರು.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪಂಚಮಸಾಲಿ ಸಮುದಾಯದ ಮತದಾರರು ಹೆಚ್ಚಾಗಿದ್ದಾರೆ‌. ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿಯೂ ಅತಿ ಹೆಚ್ಚು ಸ್ಥಾನದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದಿಂದ ಆಯ್ಕೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಸಮುದಾಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಒಂದು ವೇಳೆ ಎರಡೂ ಪಕ್ಷಗಳು ನಮ್ಮ ಸಮುದಾಯವನ್ನು ಕಡೆಗಣಿಸಿದರೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಸಮುದಾಯ ವಿರೋಧಿಸುತ್ತದೆ ಎಂದು ಶಂಕರಗೌಡ ಬಿರಾದಾರ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ ಮುಖಂಡರಾದ ಶ್ರೀಶೈಲ ಬುಕ್ಕಾಣಿ, ಲಿಂಗನಗೌಡ ಸೋಲಾಪುರ, ಸಂಜು ಬಿರಾದಾರ, ಸುನಿಲಗೌಡ ಚಿಕ್ಕೊಂಡ, ದಾನೇಶ ಅವಟಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌