ಮೈಸೂರು: ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಅನಾಹುತ ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸದಾಗಿ ಕೊರೊನಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಗಮನಿಸುತ್ತಿದ್ದರೆ ನಿಯಂತ್ರಣದಲ್ಲಿದೆ. ಇದಕ್ಕಿಂತ ಹೆಚ್ಚಿನ ಪ್ರಕರಣಗಳನ್ನು ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರೂ ಸಹ ನೈಟ್ ಕರ್ಫ್ಯೂ ಅನ್ನು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 05 ಗಂಟೆಯವರೆಗೆ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಉದ್ಯಮಗಳ ನಷ್ಟ ತಪ್ಪಿಸಲು ಈ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಷ್ಕರಿಸಲಾಗುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅಂಥ ಯಾವ ಮರುಪರಿಷ್ಕರಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶಾಸಕರಾದ ಎಸ್. ಎ. ರಾಮದಾಸ, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಡೆಪ್ಯೂಟಿ ಕಮೀಷನರ್, ಪ್ರದೀಪ ಗುಂಟಿ, ಗೀತಾ ಪ್ರಸನ್ನ, ಸೇರಿದಂತೆ ಇತರರು ಉಪಸ್ಥಿತರಿದ್ದರು.