ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ವಿಜಯಪುರ ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ ಹಾಗೂ ನಿರ್ಮಿತಿ ಕೇಂದ್ರಗಳ ವತಿಯಿಂದ ನಾನಾ ಕಡೆ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ನಗರದ ಬಾಗಲಕೋಟೆ ಕ್ರಾಸ್‍ನಿಂದ ಆರ್ ಟಿ ಓ ಕಚೇರಿಯವರೆಗೆ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಈ ರಸ್ತೆಯಲ್ಲಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯುಜಿಡಿ ಚೇಂಬರ್ ಕವರ್ ಗಳನ್ನು ಸರಿಯಾಗಿ ನಿರ್ಮಿಸಬೇಕು. ರಸ್ತೆ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಲಕಾಲಕ್ಕೆ ಈ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
ಕೇಂದ್ರ ಬಸ್ ನಿಲ್ದಾಣದಿಂದ ಮೀನಾಕ್ಷಿ ಚೌಕ್ ವರೆಗೆ ಕೈಗೊಳ್ಳಲಾಗುತ್ತಿರುವ ರಸ್ತೆ ಕಾಮಗಾರಿ ಪರಿವೀಕ್ಷಣೆ ನಡೆಸಿದ ಅವರು, ಈ ರಸ್ತೆಯಲ್ಲೂ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಒಳಚರಂಡಿ ಕವರ್ ಗಳನ್ನು ಸರಿಯಾಗಿ ಅಳವಡಿಸಬೇಕು. ರಸ್ತೆ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ರಸ್ತೆಯ ಎರಡೂ ಬದಿ ಮಳೆ ನೀರು ಸರಾಗವಾಗಿ ಹರಿಯಲು ಒಳಚರಂಡಿಯ ಹೂಳನ್ನು ತೆಗೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೋಡಗುಮ್ಮಟದಿಂದ ತಾಜಬಾವಡಿಯವರೆಗೆ ನಿರ್ಮಿತಿ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಕಾಮಗಾರಿ, ಸರಾಫ್ ಬಜಾರ ರಸ್ತೆಯ ಕಾಮಗಾರಿಯನ್ನು ಸಮರ್ಪಕವಾಗಿ ಮಾಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಿರ್ಮಿತಿ ಕೇಂದ್ರದ ಎಂಜಿನಿಯರ್ ಮಲಜಿ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.