ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಗೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಪಾದಯಾತ್ರೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ಥಿ ವಿಭಾಗೀಯ ಪೀಠ ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾದಯಾತ್ರೆ ನಡೆಸಲು ಅನುಮತಿ ನೀಡಿದ್ದು ಯಾರು? ಎಂದು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅನುಮತಿ ಕೊಟ್ಟಿಲ್ಲ ಎಂದಾದರೆ ಕ್ರಮ ಕೈಗೊಳ್ಳದಿರುಲು ಏನು ಕಾರಣ? ಸೂಕ್ತ ಕ್ರಮ ಕೈಗೊಳ್ಳಿ ಎಂದು ನ್ಯಾಯಲಯ ಹೇಳಬೇಕೇ ಎಂದು ಖಾರವಾಗಿ ಪ್ರಶ್ನಸಿದೆ.
ಇದೇ ಸಂದರ್ಭದಲ್ಲಿ ಪಾದಯಾತ್ರೆಗೂ ಮುನ್ನು ನೀವು ಅನುಮತಿ ಪಡೆದಿದ್ದೀರಾ? ಎಂದು ಕೆಪಿಸಿಸಿಗೆ ಹೈಕೋರ್ಟ್ ಪ್ರಶ್ಸಿಸಿದೆ. ಅಲ್ಲದೇ, ಈ ಕುರಿತು ಉತ್ತರ ನೀಡುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ.
ಅರ್ಜಿದಾರರ ಪರ ನ್ಯಾಯವಾದಿ ಹೇಳಿದ್ದು
ಕೊರೊನಾ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೈಗೊಂಡಿರುವ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಪ್ರಸಾದ್ ಎಂಬುವರು ಸಲ್ಲಿಸಿರುವ ಪಿಐಎಲ್ ನ್ನು ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ಸಂದರ್ಭದಲ್ಲಿ ಅರ್ಜಿದಾರರ ಪರ ನ್ಯಾಯವಾದಿ ಶ್ರೀಧರ ಪ್ರಭು ಈ ಅರ್ಜಿಯನ್ನು ತುರ್ತಾಗಿ ಪರಿಗಣಿಸಬೇಕು. ಕೊರೊನಾ ತುರ್ತು ಪರಿಸ್ಥಿತಿ ಸಮಯದಲ್ಲಿ ಕಾಂಗ್ರೆಸ್ ನಾಯಕರು ಸೋಂಕು ಹೆಚ್ಚಿಸುವ ರೀತಿಯಲ್ಲಿ ಪಾದಯಾತ್ರೆ ಕೈಗೊಂಡಿರುವುದು ಸರಿಯಲ್ಲ. ಸರಕಾರವೂ ಇದನ್ನು ನಿಯಂತ್ರಿಸುತ್ತಿಲ್ಲ ಎಂದು ನ್ಯಾಯಾಲಯಕ್ಕೆ ವಿವರಿಸಿದರು.
ಹೆಚ್ಚುವರಿ ಅಡ್ವೋಕೇಟ್ ಜನರರಲ್ ಹೇಳಿದ್ದು
ಸರಕಾರ ಪಾದಯಾತ್ರೆ ನಡೆಸುತ್ತಿರುವ ಮುಖಂಡರ ವಿರುದ್ಧ ನಿಯಮ ಉಲ್ಲಂಘನೆಗಾಗಿ ಮೂರು ಎಫ್ಐಆರ್ ದಾಖಲಿಸಿದೆ ಎಂದು ಇದೇ ಸಂದರ್ಭದಲ್ಲಿ ಸರಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಾದ ಮಂಡಿಸಿದರು.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನ್ಯಾಯಪೀಠ, ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ಪಾದಯಾತ್ರೆಗೆ ಹೇಗೆ ಅನುಮತಿ ಕೊಟ್ಟಿದ್ದೀರಿ? ಒಂದು ವೇಳೆ ಅನುಮತಿ ನೀಡಿರದಿದ್ದರೆ ಸರಕಾರ ಯಾಕೆ ಕ್ರಮ ಕೈಗೊಂಡಿಲ್ಲ? ಹೈಕೋರ್ಟ್ ಆದೇಶದ ನೀಡುವವರೆಗೆ ನೀವು ಕ್ರಮ ಕೈಗೊಳ್ಳುವುದಿಲ್ಲವೇ? ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿತು.
ಅಲ್ಲದೇ, ಸರಕಾರ ಹಾಗೂ ಕೆಪಿಸಿಸಿಗೆ ತುರ್ತು ನೋಟಿಸ್ ಜಾರಿ ಮಾಡಿದ ನ್ಯಾಯಪೀಠ ಈ ಕುರಿತು ಉತ್ತರಿಸಲು ಒಂದು ದಿನ ಕಾಲಾವಕಾಶ ನೀಡಿ, ವಿಚಾರಣೆಯನ್ನು ಜನವರಿ 14ಕ್ಕೆ ಮುಂದೂಡಿತು.