ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಒಂದು ವಾರ ರಜೆ ನೀಡಲಾಗಿದೆ.
ಜನೇವರಿ 27ರ ವರೆಗೆ ಮಹಿಳಾ ವಿಶ್ವವಿದ್ಯಾಲಯಕ್ಕೆ ರಜೆ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವುದೇ ಒಂದು ಶಾಲೆ, ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಐದಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದರೆ ಒಂದು ವಾರ ರಜೆ ನೀಡುವಂತೆ ಸರಕಾರದ ಮಾರ್ಗಸೂಚಿ ಅನ್ವಯ ವಿಜಯಪುರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು.
ಈಗ ಮಹಿಳಾ ವಿಶ್ವವಿದ್ಯಾಲಯದಲ್ಲಿ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ, ಕೊರೊನಾ ಸೋಂಕು ಇತ್ತೀಚಿನ ದಿನಗಳಲ್ಲಿ ತೀವ್ರವಾಗಿ ಹರಡುತ್ತಿರುವುದರಿಂದ ಅದನ್ನು ನಿಯಂತ್ರಿಸಲು ಒಂದು ವಾರ ಕಾಲ ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರಜೆ ನೀಡಲಾಗಿದೆ. ಅಲ್ಲದೇ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಅವಧಿಯಲ್ಲಿ ಕೇಂದ್ರ ಸ್ಥಾನ ಬಿಡದಿರಲು ಮತ್ತು ತುರ್ತು ಕೆಲಸಗಳಿದ್ದಾಗ ವಿಶ್ವವಿದ್ಯಾಲಯಕ್ಕೆ ಹಾಜರಾಗುವಂತೆ ಆದೇಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.