ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ರಾಜ್ಯ ಸರಕಾರದ ನಾನಾ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ನೇಮಕಾತಿ ಪ್ರಕ್ರಿಯೆ ಅಂಗವಾಗಿ ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲು ಮತ್ತು ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.  ನೀರಾವರಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ. ಟಿ. ಬಿ. ನಾಗರಾಜ, ಮೀನುಗಾರಿಕೆ ಸಚಿವ ಎಸ್. ಅಂಗಾರ, ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಸಮಿತಿಯ ಸದಸ್ಯರಿದ್ದಾರೆ.

ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯು ವಿವರವಾಗಿ ಪರಿಶೀಲಿಸಿತು.  ರಾಜ್ಯ ಸರಕಾರಿ ಕಾಲೇಜುಗಳಲ್ಲಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ನಾನಾ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು.  ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿತು.  ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೈಗೊಳ್ಳಬೇಕಾದ ನೇಮಕಾತಿಗಳನ್ನು ಒಂದು ವಾರದಲ್ಲಿ ಅಧಿಸೂಚಿಸಿ ಮುಂದಿನ ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಲೋಕಸೇವಾ ಆಯೋಗವನ್ನು ಕೋರಲು ಕ್ರಮಕೈಗೊಳ್ಳಬೇಕು ಎಂದು ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಯಿತು ಸಚಿವ ಗೋವಿಂದ ಎಂ. ಕಾರಜೋಳ ಅವರು ನೀಡಿರುವ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Leave a Reply

ಹೊಸ ಪೋಸ್ಟ್‌