ವಿಜಯಪುರ: ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುವ ಜನಸ್ಪಂದನ ಪೋರ್ಟಲ್‌ನ್ನು ಮೇಲ್ಬರ್ಜೆಗೇರಿಸಿದ್ದು, ಇನ್ನು ಮುಂದೆಯೂ ಜನಸ್ಪಂದನ ಅಥವಾ ಪೋರ್ಟಲ್‌ನಲ್ಲಿಯೇ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತದೆ. ಮುಖ್ಯಮಂತ್ರಿಗಳು ನಿಗಾ ಇಡುವುದರಿಂದ ಅಧಿಕಾರಿಗಳು ಬಹಳ ಗಂಭೀರ ಹಾಗೂ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ.
ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಕೀಕೃತ ಸಾರ್ವಜನಿಕ ದೂರು ನಿವಾರಣಾ ವ್ಯವಸ್ಥೆ ಅನುಷ್ಠಾನದ ಕುರಿತು ಜಿಲ್ಲೆಯ ನಾನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಈ ಏಕೀಕೃತ ಸಾರ್ವಜನಿಕ ಕುಂದು ನಿವಾರಣೆ ವ್ಯವಸ್ಥೆ ವೆಬ್ ಪೋರ್ಟಲ್ ಅಲ್ಲದೇ, ಮೊಬೈಲ್ ಅಪ್ಲಿಕೇಷನ್ ಹಾಗೂ ಸಹಾಯ ವಾಣಿಯಲ್ಲಿಯೂ ಲಭ್ಯವಿದೆ. ಅಂತರ್ಜಾಲ ವ್ಯವಸ್ಥೆಯಿಲ್ಲದ ಕುಗ್ರಾಮಗಳಿಂದ ಸಾರ್ವಜನಿಕರು 1902 ಸಹಾಯವಾಣಿಗೆ ಕರೆ ಮಾಡಿ ದೂರು, ಕುಂದುಕೊರತೆ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.
ಪ್ರತಿ ಸಿಬ್ಬಂದಿ ಹಾಗೂ ಅಧಿಕಾರಿಗಳು ತಮ್ಮ ಪ್ರತಿನಿತ್ಯದ ಅಧಿಕೃತ ದಿನಚರಿಯಲ್ಲಿ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ತಂತ್ರಾAಶಕ್ಕೆ ಲಾಗಿನ್ ಆಗಿ, ತಮ್ಮ ಖಾತೆಯಲ್ಲಿ ಬಾಕಿ ಇರುವ ಸಾರ್ವಜನಿಕ ದೂರುಗಳನ್ನು ಪರಿಶೀಲಿಸಿ ಆದ್ಯತೆಯ ಮೇರೆಗೆ ಕಾಲಕಾಲಕ್ಕೆ ಹೊರಡಿಸಲಾಗುವ ಮಾರ್ಗಸೂಚಿಗಳನ್ವಯ ನಿರ್ವಹಿಸಬೇಕು. ಪ್ರತಿ ದೂರನ್ನು ನಿರ್ವಹಿಸುವ ಪ್ರಕ್ರಿಯೆಯಲ್ಲಿ ಕೈಕೊಳ್ಳಲಾದ ಕ್ರಮಗಳ ವರದಿ (ಆಕ್ಷನ್ ಟೆಕನ್ ರೀಪೋರ್ಟ್) ತ೦ತ್ರಾ೦ಶದಲ್ಲಿಯೇ ಸಲ್ಲಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಲ್ಲಿ ಸ್ವೀಕರಿಸಲಾದ ಸಾರ್ವಜನಿಕ ಕುಂದು ಕೊರತೆಗಳನ್ನು ಸಮಗ್ರವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಿರುವ ಪ್ರಗತಿಯನ್ನು ಪ್ರತಿ ತಿಂಗಳು ಪರಿಶೀಲಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಸರಕಾರ ಆದೇಶ ನೀಡಿದೆ ಎಂದು ಅವರು ಹೇಳಿದರು.
ಈ ಸಮಿತಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುತ್ತಾರೆ. ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸದಸ್ಯರಾಗಿ, ಅಪರ ಜಿಲ್ಲಾಧಿಕಾರಿಗಳು ಸದಸ್ಯ ಕಾರ್ಯದರ್ಶಿ, ಎಲ್ಲಾ ಉಪವಿಭಾಗಗಳ ಉಪವಿಭಾಗಾಧಿಕಾರಿಗಳು ಸದಸ್ಯರು, ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕರು ಸದಸ್ಯರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದರು.
ಈ ಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಇಂಡಿ ಉಪವಿಭಾಗಾಧಿಕಾರಿ ರಾಹುಲ ಸಿಂಧೆ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜಕುಮಾರ ಯರಗಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಸೇರಿದಂತೆ ಜಿಲ್ಲೆಯ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.