ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಮೂಲಭೂತವಾಗಿ ಅತೀ ಅಗತ್ಯವಾಗಿರುವ ವಸತಿ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಿರ್ದಿಷ್ಟ ನೆಲೆ ಇಲ್ಲದೇ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುವ ಕಾರಣ ಈ ಜನಾಂಗ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ.  ಇವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿ, ಒಂದು ಸ್ಥಳದಲ್ಲಿ ನೆಲೆ ನಿಲ್ಲಲು ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಜನರು ಹೆಚ್ಚಾಗಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮತ್ತು ಹೊಸದಾಗಿ ನಿರ್ಮಾಣ ಮಾಡಿದ ಬಡಾವಣೆಗಳಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಮಾಡಿ ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು.  ಅಲ್ಲದೇ, ಈ ಜನಾಂಗ ಹೆಚ್ಚಾಗಿ ವಾಸಿಸುವ ಕಾಲನಿಗಳಲ್ಲಿ ಕಂದಾಚಾರ ಪದ್ಧತಿಗಳನ್ನು ಕೊನೆಗಾಣಿಸಲು ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಪಿ. ಸುನೀಲ ಕುಮಾರ ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಪ್ಪ ಆಶಾಪೂರ ಮಾತನಾಡಿ, ಮೆಟ್ರಿಕ್ ಪೂರ್ವದ ವಿಶೇಷ ಪ್ರೋತ್ಸಾಹಧನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ ಸೇರಿದಂತೆ ಇನ್ನೀತರ ವಿಷಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ. ಬಿ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌