ವಿಜಯಪುರ: ರಾಜ್ಯಪಾಲ(Governot) ಥಾವರಚಂದ ಗೆಹ್ಲೂಟ(Thawarchand Gehlot) ಅವರು ಮೇ 24ರಂದು ಮಂಗಳವಾರ(Tuesday) ವಿಜಯಪುರ ಜಿಲ್ಲೆಗೆ ಭೇಟಿ(Visiting Vijayapura District) ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಎಸ್. ಆನಂದ ಕುಮಾರ ನಿಡಗುಂದಿ ತಾಲೂಕಿನ ಆಲಮಟ್ಟಿಗೆ(Alamatti) ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.
ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಮೇ 24 ಮತ್ತು ಮೇ 25ರಂದು ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮೇ 24ರಂದು ರಾಜ್ಯಪಾಲರು ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಅಲ್ಲಿಂದ ಆಲಮಟ್ಟಿಗೆ ಆಗಮಿಸಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರ ವೀಕ್ಷಿಸಲಿದ್ದಾರೆ. ಅಲ್ಲದೇ, ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಮೇ 25 ರಂದು ಬೆ. ಆಲಮಟ್ಟಿಯಿಂದ ಕೂಡಲ ಸಂಗಮಕ್ಕೆ ತೆರಳಿ, ಅಲ್ಲಿಂದ ಬಾಗಲಕೋಟಗೆ ಪ್ರಯಾಣಿಸಲಿದ್ದಾರೆ. ಬಳಿಕ ಅದೇ ದಿನ ತೋಟಗಾರಿಕೆ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಅಧಿಕಾರಿಗಳು, ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರಿಗೆ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಪೂರ್ವ ನಿಗದಿಯಂತೆ ರಾಜ್ಯಪಾಲರ ಭೇಟಿ ದಿನದಂದು ಶಿಷ್ಠಾಚಾರದಂತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲು ತಹಸೀಲ್ದಾರ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನಿರ್ದೇಶನ ನೀಡಿದರು.
ರಾಜ್ಯಪಾಲರ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ವ್ಯವಸ್ಥೆ ಮಾಡಲಾಗುವುದು ಎಂದು ಇದೆ ವೇಳೆ ಎಸ್ಪಿ ಎಚ್. ಡಿ. ಆನಂದ ಕುಮಾರ ತಿಳಿಸಿದರು.