ಹುಬ್ಬಳ್ಳಿ: ಎಲ್ಲಕಡೆ ಬಿಜೆಪಿ ಪರವಾದ ಪ್ರತಿಕ್ರಿಯೆಯನ್ನು ಗಮನಿಸಿದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದು, ಇದುವರೆಗೂ ನಡೆದಿರುವ ಅಭಿಯಾನ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿದರೆ ಭಿಜೆಪಿಗೆ ಗೆಲುವು ಖಚಿತ ಎಂಬ ವಿಶ್ವಾಸ ಮೂಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಆ್ಯಸಿಡ್ ದಾಳಿ ಮಾಡುವವರ ವಿರುದ್ಧ ಕಠಿಣ ಕಾನೂನು
ಇದೇ ವೇಳೆ, ಆ್ಯಸಿಡ್ ದಾಳಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿ ರೂಪಿಸುವಂತೆ ಕಾನೂನು ತಜ್ಞರಿಗೆ ಸೂಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿಯಾಗಿರುವುದು ಬಹಳ ದುರದೃಷ್ಟಕರ. ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಚಿಂತನೆ ಇದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಸಿ. ಎನ್. ಅಶ್ವತ್ಥನಾರಾಯಣ, ಉಮೇಶ ಕತ್ತಿ, ಶಂಕರ ಪಾಟೀಲ ಮುನೇನಕೊಪ್ಪ ಮುಂತಾದವರು ಉಪಸ್ಥಿತರಿದ್ದರು.