ZP CEO: ಕಾಳಜಿ ವಹಿಸಿ ಕರ್ತವ್ಯ ನಿರ್ವಹಿಸಲು ಸಿಡಿಪಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ರಾಹುಲ ಶಿಂಧೆ ಸೂಚನೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಅಂಗನವಾಡಿ ಮೇಲ್ವಿಚಾರಕಿಯರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ವಿಜಯಪುರ ಜಿ. ಪಂ. ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಇಓ ಅವರು, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರಗತಿ ಪರಿಶೀಲನೆ ಮಾಡಲಾಗಿ 2022-23ನೇ ವರ್ಷದಲ್ಲಿ ನಿಗದಿ ಪಡಿಸಿದ ಗುರಿಗೆ ತಕ್ಕಂತೆ ಗರ್ಭಿಣಿ ಫಲಾನುಭವಿಗಳ ಅರ್ಜಿಗಳನ್ನು ತಂತ್ರಾಂಶದಲ್ಲಿ ನೋಂದಣಿ ಮಾಡಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಜಾರಿಗಳು

 

ಜಿಲ್ಲೆಯಲ್ಲಿರುವ 0 ರಿಂದ 6 ವರ್ಷದ ಮಕ್ಕಳಿಗೆ ತೂಕ ಹಾಗೂ ಎತ್ತರ ಅಳತೆ ಮಾಡಿ ಕುಬ್ಜತೆ (ಸ್ಟಂಟಿಂಗ್), ಕುಂಠಿತ ಬೆಳವಣಿಗೆ (ವೇಸ್ಟಿಂಗ್) ಮತ್ತು ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅಂತಹ ಮಕ್ಕಳ ಆರೋಗ್ಯ ಸುಧಾರಣೆಗೆ ಒತ್ತು ಕೊಡಬೇಕು ಎಂದು ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಪ್ರತಿ ತಿಂಗಳು ನಡೆಯುವ ಆರೋಗ್ಯ ತಪಾಸಣೆಯಲ್ಲಿ ಗುರುತಿಸಲ್ಪಟ್ಟ ಸಾಧಾರಣ ಮತ್ತು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ತಜ್ಞ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಪೌಷ್ಠಿಕ ಪುನರ್ವಸತಿ ಕೇಂದ್ರಗಳಿಗೆ (ಎನ್.ಆರ್.ಸಿ) ಕಳುಹಿಸಲು ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಂತಹ ಮಕ್ಕಳ ಪಾಲಕರ ಮನವೊಲಿಸಲು ಕಾಳಜಿ ತೋರಬೇಕು ಎಂದು ರಾಹುಲ ಶಿಂಧೆ ತಿಳಿಸಿದರು.

ಈ ಹಿಂದೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಆಕಸ್ಮಿಕ ಭೇಟಿ ನೀಡಿದ ವೇಳೆ ಕಂಡು ಬಂದ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು ಇದೆ ವೇಳೆ ಸಿಇಓ ಅವರು ವಲಯ ಮೇಲ್ವಿಚಾರಕಿಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಪುನಃ ಸೂಚನೆ ನೀಡಿದರು.

ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು

ಜಿಲ್ಲೆಯ ಎಲ್ಲ ಮಕ್ಕಳ ಬೆಳವಣಿಗೆ, ವಿದ್ಯಾಭ್ಯಾಸ, ಅಭಿವೃದ್ಧಿ ಹಾಗೂ ಮಕ್ಕಳ ಭವಿಷ್ಯ ಮತ್ತು ಜಿಲ್ಲೆಯ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಯ ಪಾತ್ರ ಅತೀ ಮುಖ್ಯವಾಗಿರುತ್ತದೆ. ಆದ್ದರಿಂದ ನೀವೆಲ್ಲರೂ ಜವಾಬ್ದಾರಿಯುತವಾಗಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಯಾವುದೇ ತಾರತಮ್ಯ ಮಾಡದೇ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸೂಚನೆ ನೀಡಿದರು.

ಈ ಸಭೆಯಲ್ಲಿ ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ. ಕೆ. ಚವ್ಹಾಣ, ಜಿಲ್ಲಾ ನಿರೂಪಣಾಧಿಕಾರಿ ಗೀತಾ ಗುತ್ತರಗಿಮಠ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಗುಂಡಬೌಡಿ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌