ವಿಜಯಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಯೊಜನೆಗಳ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೊದಲನೇ ಹೆರಿಗೆಗೆ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ರೂ. 5000 ನೀಡಲಾಗುತ್ತದೆ. ಆದ್ದರಿಂದ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಿ ಆನ್‌ಲೈನದಲ್ಲಿ ಅಪಲೋಡ್ ಮಾಡಿ ಈ ಸೌಲಭ್ಯ ಸಿಗಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಇಂಥ ಮಹತ್ವದ ಯೋಜನೆಯಿಂದ ಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಎಚ್ಷರಿಕೆ ವಹಿಸಬೇಕು ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕಾನೂನುಗಳನ್ನು ಅನುಷ್ಠಾನ ಮಾಡುವಾಗ ಕಾನೂನು ಸಲಹೆಗಾರರು ಮತ್ತು ವಕೀಲರ ಅವಶ್ಯಕತೆ ಇರುವುದನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ತಿಳಿಸಿದರೆ ಅಗತ್ಯ ಸೇವೆ ಒದಗಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಮಾತನಾಡಿ, ನಾನಾ ಇಲಾಖೆಗಳಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹತ್ವದ ಇಲಾಖೆಯಾಗಿದೆ. ಇಲಾಖೆಯ ನಾನಾ ಯೋಜನೆಗಳ ಅನುಷ್ಠಾನದ ಬಗ್ಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು ಪ್ರತಿ ವಾರ ಪರಿಶೀಲನೆ ನಡೆಸಿ, ನಿಗದಿಪಡಿಸಿದ ಗುರಿ ಸಾಧನೆಗೆ ಒತ್ತು ಕೊಡಬೇಕು. ಎಲ್ಲ ಯೋಜನೆಗಳು ಶೇ.100 ರಷ್ಟು ಅನುಷ್ಠಾನವಾಗಬೇಕು ಎಂದು ಸಲಹೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ. ಕೆ. ಚವ್ಹಾಣ, ನಿರೂಪಣಾಧಿಕಾರಿ ಗೀತಾ ಗುತ್ತಲಿಮಠ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ನಾನಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.