Ayushman Bharat: ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಜಿಲ್ಲಾ ಕುಂದು ಕೊರತೆ ನಿವಾರಣೆ ಸಭೆ

ವಿಜಯಪುರ: ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜೂನ್ 27ರಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ಟೀಯ ಸ್ವಾಸ್ಥ್ಯ ಭಿಮಾ ಯೋಜನೆಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ ಎಂಬ ಮಾಹಿತಿಯನ್ನು ನೀಡಬೇಕು. ಎಪಿಎಲ್ ಕಾರ್ಡುದಾರರು ಅಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡು ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂಬುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ದಾಖಲಾಗುವ ರೋಗಿಗಳಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ಎಲ್ಲ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಸೂಚಿಸಿದರು.

ಸಾರ್ವಜನಿಕರಲ್ಲಿ ಮನವಿ: ಬಿಪಿಎಲ್ ಅಥವಾ ಎಪಿಎಲ್ ಕಾರ್ಡು ಇದ್ದವರು ಸಮೀಪದ ಗ್ರಾಮ ಪಂಚಾಯಿತಿಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ಮಾಡಿ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡು ತೋರಿಸಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಭೆಯ ಮೂಲಕ ವಿಜಯಪುರ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರು ಮಾತನಾಡಿ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗೀತ್ವದ ಮಹತ್ವದ ಯೋಜನೆಯಾಗಿದ್ದು, ಅರ್ಹ ಫಲಾನುಭವಿಗಳಿಗೆ ಈ ಯೋಜನೆಯಿಂದ ಅನುಕೂಲವಾಗಬೇಕು ಎಂದರು. ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಯೋಜನೆಯ ಸೌಲಭ್ಯ ಪಡೆಯುವುದರ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಶಸ್ತç ಚಿಕಿತ್ಸಕರಾದ ಡಾ.ಎಲ್.ಎಸ್.ಲಕ್ಕನ್ನವರ, ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂಪತ್ ಗುಣಾರಿ ಹಾಗು ವಿವಿಧ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ರೋಗಿಗಳು ಮತ್ತು ರೋಗಿಗಳ ಸಂಬಂಧಿಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌