Tiranga Programme: ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಲಹೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ  ಈ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳು, ಇತರೆ ಎಲ್ಲಾ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಕ್ರಿಯಾಶೀಲವಾಗಿ  ಭಾಗವಹಿಸುವಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.  ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಂದ ಹಾಗೂ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳ ಕಾರ್ಯವ್ಯಾಪ್ತಿಯಲ್ಲಿ ಸಹ ಈ ಅಭಿಯಾನ ಯಶಸ್ಸಿಗೆ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನಗಳ ಕಾರಣದಿಂದ ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ ಭಾರತಾಂಬೆಗೆ ಪ್ರಾಪ್ತಿಯಾದ ಸ್ವಾತಂತ್ರಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮ. ಈ ಸಂದರ್ಭದಲ್ಲಿ ಅದಕ್ಕೆ ಕಾರಣವಾದ ಎಲ್ಲರನ್ನು ಸದಾ ಸ್ಮರಿಸುವುದು ಹಾಗೂ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಇಂದಿನ ನಮ್ಮ ಸಂಭ್ರಮಕ್ಕೆ ತಳಪಾಯವಾಗಿ, ಮೆಟ್ಟಿಲುಗಳಾಗಿ ತಮ್ಮ ಜೀವ-ಜೀವನ ತ್ಯಾಗ ಮಾಡಿದ ಎಲ್ಲರನ್ನು ಮರೆಯದೆ ಸದಾ ಸ್ಮರಿಸುತ್ತಾ ಭವ್ಯ ಭಾರತವನ್ನು ಕಟ್ಟುವಲ್ಲಿ ನಮ್ಮ ಜವಾಬ್ದಾರಿಯುತ ಪಾತ್ರವನ್ನು ನಿರ್ವಹಿಸಬೇಕಿದೆ ಎಂದು ಹೇಳಿದರು.

ಅಲ್ಲದೇ, ದೇಶಾದ್ಯಂತ ಭಾರತ ಸ್ವಾತಂತ್ರದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಆ. 11 ರಿಂದ 17 ರವರೆಗೆ ದೇಶದ ಪ್ರತಿ ಮನೆ- ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿ ಅಭಿಯಾನ ಹಮ್ಮಿಕೊಂಡಿದೆ.‌ ಜಿಲ್ಲೆಯ ಜನತೆ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಅವರು ತಿಳಿಸಿದರು.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡ ನಾನಾ ಇಲಾಖೆಗಳ ಅಧಿಕಾರಿಗಳು

ಈ ಅಭಿಯಾನದ ವೇಳೆ ಕೆಲವು ನಿಯಮಗಳನ್ನು ಮತ್ತು ನಿರ್ದೇಶನಗಳನ್ನು ಅನುಸರಿಸಬೇಕು ಎಂದು ಸಲಹೆ ಮಾಡಿದ ಅವರು, ರಿಂದ 17ನೇ ಆಗಸ್ಟ್ 2022ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಬೇಕು. ಪತಿ ಮನೆ- ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸುವಂತೆ 11ನೇ ಆಗಸ್ಟ್ 2022 ರಂದು ಗ್ರಾಮೀಣ ಭಾಗದ ಎಲ್ಲಾ ಸಮುದಾಯಗಳಿಗೆ ಸರ್ಕಾರ, ಸರ್ಕಾರೇತರ ಸಂಸ್ಥೆಗಳಿಗೆ ಸಾರ್ವಜನಿಕ ಉದ್ಯಮಗಳು, ಶಾಲಾ-ಕಾಲೇಜು ಮಕ್ಕಳಿಗೆ ತಿಳಿಸುವ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕು ಎಂದು ಹೇಳಿದರು.

ಈ ಅಭಿಯಾನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸ್ಥಳೀಯ ಭಾಷೆಯಲ್ಲಿ ಕರಪತ್ರ, ಬ್ಯಾನರ್‌ ಇತ್ಯಾದಿಗಳ ಮುಖಾಂತರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಹಲಗಳು, ಉದ್ಯಾನವನಗಳು, ಹೋಟೆಲ್ ಗಳು, ಪ್ರತಿ ಗ್ರಾಮಗಳಲ್ಲಿ ಸಾರ್ವಜನಿಕ ಸಂಪರ್ಕ ಹೊಂದಿರುವ ಕಚೇರಿಗಳ ಮುಂದೆ ಪ್ರಚಾರ ಮಾಡಲು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಅಭಿಯಾನದಂಗವಾಗಿ ಆ. 11ರಿಂದ ಆ. 17ರ ವರಗೆ ತಮ್ಮ ತಮ್ಮ ಮನೆಯ ಮೇಲೆ ಮನೆಯ ಅಂಗಳದಲ್ಲಿ ಕುಟುಂಬದೊಂದಿಗೆ ರಾಷ್ಟ್ರ ಧ್ವಜಾರೋಹಣ ಮಾಡುವಂತೆ ಪೋಷಕರಿಗೆ ತಿಳಿಸಲು ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಲ್ಲಿ ಅರಿವು ಮೂಡಿಸಲು ಪ್ರತಿದಿನ ಬೆಳಗ್ಗೆ ಜರುಗುವ ಪ್ರಾರ್ಥನಾ ಸಮಯದಲ್ಲಿ ಶಾಲಾ-ಕಾಲೇಜುಗಳಿಂದ ತಿಳಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಪಪೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಪಥ ಸಂಚಲನ, ಸೆಮಿನಾರ್, ಗುಂಪು ಚರ್ಚೆ, ಪೋಸ್ಡರಗಳ ಮುಖೇನ ತಿಳಿಸಿ ಪ್ರತಿ ಮನೆ- ಮನೆಯಲ್ಲೂ ರಾಷ್ಟ್ರ ಧ್ವಜ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಗ್ರಾಮೀಣ ಭಾಗದ ಸಂಸ್ಥೆಗಳು, ಎಲ್ಲಾ ಸಾರ್ವಜನಿಕರುಗಳಿಗೆ ಸಮುದಾಯಗಳಿಗೆ ತಿಳಿಸಬೇಕು.  ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಾದ ಪಂಚಾಯಿತಿ ರಾಜ್ ಸಂಸ್ಥೆಗಳು, ಸ್ವ-ಸಹಾಯ ಸಂಘಗಳು, ಒಕ್ಕೂಟಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ

ಆರೋಗ್ಯ ಕೇಂದ್ರ, ಉಪಕೇಂದ್ರ, ಸಹಕಾರ ಸಂಘಗಳು, ಉಪ ಅಂಚೆ ಕಛೇರಿಗಳಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ರೋಜಗಾರ್ ಸೇವಕರುಗಳು, ಶಿಕ್ಷಕರುಗಳನ್ನು ಉತ್ತೇಜಿಸಿ ಎಲ್ಲರೂ ಸಕ್ರಿಯವಾಗಿ ಅಭಿಯಾನದಲ್ಲಿ ಭಾಗವಹಿಸುವಂತೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಪ್ರತಿ ಮನೆ- ಮನೆಯಲ್ಲೂ ರಾಷ್ಟ್ರ ಧ್ವಜ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಸ್ವ- ಸಹಾಯ ಗುಂಪುಗಳು ಸಹ ರಾಷ್ಟ್ರೀಯ ಧ್ವಜವನ್ನು ತಯಾರಿಸಬಹುದಾಗಿದೆ.  ಈ ಕುರಿತು ಹೆಚ್ಚಿನದಾಗಿ ಪ್ರೋತ್ಸಾಹಿಸಲು ಸ್ಥಳೀಯ ಪಂಚಾಯಿತಿ ರಾಜ್ ಸದಸ್ಯರುಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಬೇಕು ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ, ವಿಜಯಪುರ ಸಹಾಯಕ ಆಯುಕ್ತರಾದ ಬಲರಾಮ ಲಮಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ, ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌