ವಿಜಯಪುರ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೊರೊನಾ ಭೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರ ನಗರದ ಕೃಷ್ಣ ಮಠದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ,ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಈಗಾಗಲೇ ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ 75 ದಿನಗಳ ವಿಶೇಷ ಕೋವಿಡ್ ಲಸಿಕಾ ಅಮೃತ ಮಹೋತ್ಸವ ಅಭಿಯಾನವನ್ನು ಸಹ ಆಯೋಜಿಸಲಾಗಿದೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಅಭಿಯಾನದಲ್ಲಿ ಭಾಗಿಯಾಗಿ ಉಚಿತವಾಗಿ ಭೂಸ್ಟರ್ ಡೋಸ್ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೋಳಸಂಗಿ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಮುಖಂಡರು ಮತ್ತೀತರರು ಉಪಸ್ಥಿತರಿದ್ದರು.