DC Meeting: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಪೂರ್ವಭಾವಿ ಸಿದ್ಧತಾ ಸಭೆ

ವಿಜಯಪುರ: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅ. 20ರಂದು ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

ತಹಸೀಲ್ದಾರ ಅವರು ಗ್ರಾಮಕ್ಕೆ ಭೇಟಿ ನೀಡಿ ಸ್ವೀಕರಿಸಿದ ಅರ್ಜಿಗಳ ಬಗ್ಗೆ, ಗ್ರಾಮದಲ್ಲಿ ಸ್ಮಶಾನ ಲಭ್ಯತೆ, ಸರ್ಕಾರಿ ಜಮೀನು ಒತ್ತುವರಿ ಪ್ರಕರಣ, ಶಾಲೆ ಮತ್ತು ಅಂಗನವಾಡಿಗಳ ಸ್ಥಿತಿಗತಿ, ಬಿಪಿಎಲ್ ಕಾರ್ಡುಗಳ ಬಗ್ಗೆ, ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣದ ಬಗ್ಗೆ, ಜಮೀನುಗಳ ಮಧ್ಯೆ ಇರುವ ರಸ್ತೆಗಳ ವಿವಾದ, ಚುನಾವಣಾ ಗುರುತಿನ ಚೀಟಿ ವಿತರಣೆ, ಆರೋಗ್ಯ ಕಾರ್ಡುಗಳ ವಿತರಣೆ ಸೇರಿದಂತೆ ಇನ್ನೀತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ನಡೆಯಿತು

ಪತ್ರಿಕಾ ಪ್ರಕಟಣೆಯ ಮೂಲಕ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಬಗ್ಗೆ ಪ್ರಚಾರ ನಡೆಸಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಇದುವರೆಗೆ ಒಟ್ಟು 28 ಅರ್ಜಿಗಳು ಬಂದಿವೆ. ಈ ಪೈಕಿ 16 ಅರ್ಜಿಗಳು ಪಿಂಚಣಿಗೆ ಸಂಬಂಧಿಸಿವೆ ಎಂದು ತಹಸೀಲ್ದಾರ ಅವರು ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಪ್ರತಿ ಬಾರಿಯಂತೆ ಈ ಬಾರಿಯೂ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಕಾರ್ಯಕ್ರಮದಲ್ಲಿ ರೈತರಿಗೆ ತಿಳಿವಳಿಕೆ ಮೂಡಿಸಬೇಕು. ತೋಟಗಾರಿಕೆ, ರೇಷ್ಮೆ, ಮೀನುಗಾರಿಯ ಯೋಜನೆಗಳ ಬಗ್ಗೆ ಗ್ರಾಮೀಣ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು. ನರೇಗಾ ಯೋಜನೆಯಡಿಯಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಕೋವಿಡ್-19 ಲಸೀಕಾಕರಣದ ಬಗ್ಗೆ ವ್ಯವಸ್ಥೆ ಮಾಡಲು ಇದೆ ವೇಳೆ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೇರೆ ಬೇರೆ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಮತ್ತು ಗ್ರಾಮಸ್ಥರಿಗೆ ಸವಲತ್ತು ವಿತರಣೆಯ ಬಗ್ಗೆ ಅಗತ್ಯ ಏರ್ಪಾಡು ಮಾಡಲು ವಿವಿಧ ಅಧಿಕಾರಿಳಿಗೆ ಸೂಚನೆ ನೀಡಿದರು.

ಅಧಿಕಾರಿಗಳಿಗೆ ಸೂಚನೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ದಿನದಂದು ಗ್ರಾಮ ಭೇಟಿ, ಶಾಲೆ-ಅಂಗನವಾಡಿ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕಾರ್ಯಕ್ರಮ ದಿನದಂದು ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯ ಹಾಜರಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.\

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌