Sambanni Warn: ಬಿಜೆಪಿಯಿಂದ ಸಾವರ್ಕರ ಹೆಸರಿನಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ- ಗಂಗಾಧರ ಸಂಬಣ್ಣಿ ಆರೋಪ

ವಿಜಯಪುರ: ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್ ಫೋಟೋಗಳನ್ನು ಅಂಟಿಸುವ ಮೂಲಕ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸೇವಾದಳದ ಜಿಲ್ಲಾಧ್ಯಕ್ಷ ಡಾ. ಗಂಗಾಧರ ಸಂಬಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿಯವರು ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಇಂಥ ಹೀನ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ವಿಫಲರಾಗಿ ಈಗ ಸಾರ್ವಜನಿಕರ ಗಮನವನ್ನು ಬೇರೆ ಕಡೆ ಸೆಳೆಯಲು ಈ ತಂತ್ರ ಅನುಸರಿಸುತ್ತಿದ್ದಾರೆ. ಇದು ಅವರಿಗೆ ಶೋಭ ತರುವುದಿಲ್ಲ. ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಎಲ್ಲರೂ ಸಾಮರಸ್ಯರಿಂದ ಬಾಳುವುದು ಈಗ ಅಗತ್ಯವಾಗಿದೆ. ಆದರೆ ತಮ್ಮ ಭಿನ್ನಾಭಿಪ್ರಾಯಗಳನ್ನು ರಾಜಕೀಯಕ್ಕಾಗಿ ಈ ರೀತಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಬಿಜೆಪಿಯಲ್ಲಿ ಇರುವ ಹಿರಿಯರು ಇಂಥ ಕೃತ್ಯ ನಡೆಸುವ
ಕಿರಿಯರಿಗೆ ಬುದ್ಧಿವಾದ ಹೇಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ಕೃತ್ಯ ನೋಡಿದರೆ ಮುಂಬರುವ ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಮಹಾನಗರ ಪಾಲಿಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ವರಿಷ್ಠರ ಓಲೈಕೆಗಾಗಿ ಬಿಜೆಪಿ ಕಾರ್ಯಕರ್ತರು ಹೀಗೆ ವರ್ತಿಸುತ್ತಿದ್ದಾರೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಯಾವುದೇ ಒಂದು ವಿಚಾರದಲ್ಲಿ ತಾತ್ವಿಕ ಭಿನ್ನಾಭಿಪ್ರಾಯವಿದ್ದರೆ ಅದನ್ನು ಈ ರೀತಿ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಈ ದುರ್ವರ್ತನೆ ಅವರ ಮಾನಸಿಕ ಸ್ಥಿತಿಯನ್ನು ತೊರಿಸುತ್ತದೆ. ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರ ಸಮಯವನ್ನು ಇಂಥ ಕೃತ್ಯಗಳನ್ನು ಮಾಡುವ ಮೂಲಕ ರಾಜಕೀಯ ದುರುದ್ದೇಶಗಳಿಗೆ ಬಳಸಿಕೊಳ್ಳುವ ಪ್ರಯತ್ನ ಇದಾಗಿದೆ ಎಂದು ಡಾ. ಗಂಗಾಧರ ಸಂಬಣ್ಣ ಅವರು ಕಿಡಿಕಾರಿದ್ದಾರೆ.

ಇದೇ ವೇಳೆ ಕೊಡಗಿನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಖಂಡಿಸಿರುವ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರ ಈ ವರ್ತನೆ ದಾರಿ ತಪ್ಪಿದ ಮಕ್ಕಳ ರೀತಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಕಚೇರಿ ಮತ್ತು ನಾಯಕರಿಗೆ ಕರ್ನಾಟಕ ಮತ್ತು ಕೇಂದ್ರ ಸರಕಾರಗಳು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಬಿಜೆಪಿಯವರು ತಮ್ಮ ದುರ್ವರ್ತನೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಈಗ ಶಾಂತರಾಗಿರುವ ಕಾಂಗ್ರೆಸ್‌ ಕಾರ್ಯಕರ್ತರು ಕೂಡ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರ ವರ್ತನೆಗೆ ಪ್ರತಿಯಾಗಿ ಸಿಡಿದೆಳಬೇಕಾಗುತ್ತದೆ ಎಂದು ಡಾ. ಗಂಗಾಧರ ಸಂಬಣ್ಣ ಗಂಭೀರ ಎಚ್ಚರಿಕೆ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌