Double Engine Modi: ಡಬಲ್ ಎಂಜಿನ್ ಸರಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ನರೇಂದ್ರ ಮೋದಿ

ಮಂಗಳೂರು: ಕೇಂದ್ರ ಮತ್ರು ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಮಂಗಳೂರಿನಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು

ಮಂಗಳೂರಿನಲ್ಲಿ ಇಲ್ಲಿನ ಗೋಲ್ಡಫಿಂಚ್ ಮೈದಾನದಲ್ಲಿ ರೂ. 3800 ಕೋ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಅವರು ಮಾತನಾಡಿದರು.

ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ಕು ಪಟ್ಟು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ 30 ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ 30 ಲಕ್ಷ ಫಲಾನುಭಿಗಳಿಗೆ ರೂ. 4000 ಕೋ. ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಪ್ರಧಾನಿ ತಿಳಿಸಿದರು.

 

ದೇಶದ ಪ್ರಥಮ ಸ್ವದೇಶಿ ಏರ್‌ಕ್ರಾಫ್ಟ್ ವಾಹಕ ನೌಕೆಯನ್ನು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ ರೂ. 3800 ಕೋ.ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ. ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಅವರು ಹೇಳಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾಣಿ ಅಬ್ಬಕ್ಕ ಮತ್ತು ರಾಣಿ ಚೆನ್ನಭೈರಾದೇವಿ ಅವರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಡಬಲ್ ಎಂಜಿಜಿನ್ ಸರಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ರೂ. 3800 ಕೋ. ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ರಾಜ್ಯದ ಸಿ ಆರ್‌ ಜೆಡ್ ಮಾಸ್ಟರ್ ಪ್ಲಾನ್‌ಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಕಳೆದ 30 ವರ್ಷಗಳ ಹೋರಾಟಕ್ಕೆ ಇದೀಗ ಫಲ ದೊರಕಿದೆ. ಇದರಿಂದ ಕರಾವಳಿಯ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಸಾಗರ ಮಾಲಾ ಯೋಜನೆಯಡಿ ಕಾರವಾರ ಬಂದರಿನಲ್ಲಿ ರೂ. 276 ಕೋ. ಮೊತ್ತದ ಅಭಿವೃದ್ಧಿ ಯೋಜನೆಗಳು ಅನುಷ್ಟಾನಗೊಳ್ಳುತ್ತಿವೆ. ಇದೇ ರೀತಿ ಹೊನ್ನಾವರ ಮತ್ತು ಕುಮಟಾ ಬಂದರುಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಪಿಎಂ ಮತ್ಸ್ಯಸಂಪದ ಯೋಜನೆಯಡಿ ಆಳ ಮೀನುಗಾರಿಕೆಗೆ ಹೈಸ್ಪೀಡ್ ಬೋಟ್‌ಗಳನ್ನು ಖರೀದಿಸಲು ಕೇಂದ್ರ ಸರಕಾರ ಶೇ. 40ರಷ್ಟು ಸಬ್ಸಿಡಿ ಒದಗಿಸಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ ಸರ್ಬಾನಂದ ಸೊನೊವಾಲ, ಶ್ರೀಪಾದ ನಾಯಕ, ಶಾಂತನು ಠಾಕೂರ, ಶೋಭಾ ಕರಂದ್ಲಾಜೆ, ಸಂಸದ ನಳಿನಕುಮಾರ ಕಟೀಲ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.‌ ಅಂಗಾರ, ಸುನೀಲಕುಮಾರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌