Increase Voting: ಮತದಾನ ಹೆಚ್ಚಿನ ಪ್ರಮಾಣದಲ್ಲಿ ನಡೆಯಲು ಜಾಗೃತಿ ಮೂಡಿಸಿ- ಪಿ. ಎಸ್. ವಸ್ತ್ರದ

ವಿಜಯಪುರ: 18 ರಿಂದ 20 ವರ್ಷದೊಳಗಿನ ನವ ಮತದಾರರು, ಮುಖ್ಯವಾಹಿನಿಯಿಂದ ದೂರವಿರುವ ಅಲೆಮಾರಿ ಜನಾಂಗದವರು, ವಿಕಲಚೇತನರು ಮತ್ತು ಹಿರಿಯ ನಾಗರೀಕರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಅವರಲ್ಲಿ ಜಾಗೃತಿ ಮೂಡಿಸಲು  ರಚನಾತ್ಮಕ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ. ಎಸ್. ವಸ್ತ್ರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ನಡೆದ ಸ್ವೀಪ್ ಹಾಗೂ ಇಎಲ್‍ಸಿ ಕಾರ್ಯಚಟುವಟಿಕೆಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮತದಾನ ಕೇಂದ್ರಕ್ಕೆ ಅಗತ್ಯವಾಗಿ ಕೊಂಡೋಯ್ಯಬೇಕಾದ ಇವಿಎಂಗಳ ಬಳಕೆ ಮತ್ತು ಚುನಾವಣೆ ಪ್ರಕ್ರಿಯೆಯ  ಪಾವಿತ್ರ್ಯತೆಯ ಪಾಲನೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಸಹ ನಿರಂತರವಾಗಿ ಸಂಘಟಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಸ್ವೀಪ್ ನೋಡಲ್ ಅಧಿಕಾರಿ ಪಿ. ಎಸ್. ವಸ್ತ್ರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಸಂಬಂಧಿಸಿದ ಘಟಕಗಳು, ಸಂಚಾಲನಾ ಸಮಿತಿ ಮತ್ತು ಕಾರ್ಯಪಡೆಗಳು ಅತ್ಯಗತ್ಯವಾಗಿ ಗಮನಿಸಬೇಕಾದ ಸಂಗತಿಗಳಾದ ಪಟ್ಟಿಯಲ್ಲಿನ ಹೆಸರು, ಸರಿಯಾದ ನಮೂದು, ಕಾಲಕಾಲಕ್ಕೆ ನಡೆಯುವ ಚುನಾವಣೆಗಳ ಮತದಾನದ ದಿನಾಂಕ, ಸಮಯ ಮೊದಲಾದ ವಿವರಗಳ ಬಗ್ಗೆ ಗಮನ ಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು.

ಮತದಾರರು ಕಡ್ಡಾಯವಾಗಿ ತಮ್ಮ ಎಪಿಕ್ ಚೀಟಿಗೆ ಆಧಾರ್ ಜೋಡಣೆ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ಆಧಾರ್ ಇಲ್ಲದಿದ್ದಲ್ಲಿ ಚುನಾವಣಾ ಆಯೋಗವು ಗುರುತಿಸಿದ ಯಾವುದಾದರೂ ಪೂರಕ ದಾಖಲೆಗಳೊಂದಿಗೆ ಆಧಾರ್ ಜೋಡಣೆ ಕಡ್ಡಾಯವಾಗಿ ಮಾಡಿಕೊಳ್ಳುವಂತೆ ಮತದಾರರಲ್ಲಿ ಸೂಕ್ತ ಜಾಗೃತಿ ಮೂಡಿಸುವಂತೆ ಪಿ. ಎಸ್ ವಸ್ತ್ರದ ಕಟ್ಟುನಿಟ್ಟಿನ ಸೂಚನೆ ನೀಡಿದರು.

2023ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಜಾಗೃತಿ, ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ಇಲಾಖೆ ಅಧಿಕಾರಿಗಳು, ವಿಶ್ವವಿದ್ಯಾಲಯದ ಉನ್ನತ ಅಧಿಕಾರಿ, ಸರ್ಕಾರೇತರ ಸಂಘ-ಸಂಸ್ಥೆಗಳ ಒಕ್ಕೂಟ ಪದಾಧಿಕಾರಿಗಳು, ಎನ್‍ಸಿಸಿ ಅಧಿಕಾರಿಗಳು, ಜಿಲ್ಲಾ ಅಗ್ರಣೀಯ ಬ್ಯಾಂಕ್ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಸ್ವೀಪ್ ಚಟುವಟಿಕೆಗಳ ಭಾಗವಾಗಿ 2023ರ ಮಾರ್ಚ್‍ವರೆಗೆ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಕುರಿತು ವಾರ್ಷಿಕ ಕ್ರೀಯಾ ಯೋಜನೆ ಸಿದ್ಧಪಡಿಸಿ ಹಂಚಿಕೊಳ್ಳಲಾಗಿದೆ. ಈ ಕಾರ್ಯದಲ್ಲಿ ಅನುದಾನ, ಅನುದಾನ ರಹಿತ ಎಲ್ಲ ಸಂಘ-ಸಂಸ್ಥೆಗಳು ಸಹ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಮತದಾರರಲ್ಲಿ ಜಾಗೃತಿ-ಮತದಾನ ಪ್ರಮಾಣ ಹೆಚ್ಚಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.

ಮತದಾರ ಸಹಾಯವಾಣಿ ಸಂಖ್ಯೆ 1950 ಸಂಪರ್ಕಿಸಿ, ಮತದಾರರು ತಮ್ಮ ವಿವರವನ್ನು ಖಚಿತಪಡಿಸಿಕೊಳ್ಳಬೇಕು. ಈ ಸಹಾಯವಾಣಿಯನ್ನು ಸಂಪರ್ಕಿಸಿ ಮತದಾನದ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಮತದಾರರು ತಮ್ಮ ಮತಗಟ್ಟೆ, ಸೇರಿದಂತೆ ಮತದಾರರ ಸಮಸ್ಯೆಗಳ ಕುರಿತು ಈ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಸಹಾಯ ಪಡೆದುಕೊಳ್ಳಬಹುದಾಗಿದೆ ಎಂಬುದರ ಕುರಿತಾಗಿಯೂ ಜಾಗೃತಿ ಮೂಡಿಸಬೇಕು ಎಂದು ಪಿ. ಎಸ್. ವಸ್ತ್ರದ ಹೇಳಿದರು.

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಮಾತನಾಡಿ, ಐಎಲ್‍ಓಗಳು ಸಹ ಮನೆ-ಮನೆಗೆ ಭೇಟಿ ನೀಡಿ ಮತದಾರರಲ್ಲಿ ಜಾಗೃತಿ ಮೂಡಿಸಬೇಕು, ಮತದಾನದ ಹಕ್ಕು ಚಲಾಯಿಸಲು ಬೇಕಾಗುವ ದಾಖಲೆಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮಕ್ಕಳಕಿ, ಜಿ. ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು, ನಾನಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌