ವಿಜಯಪುರ: ಮಕ್ಕಳ ಆರೋಗ್ಯ ಸುರಕ್ಷತೆ ಮತ್ತು ಚಿಕಿತ್ಸೆಗಾಗಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿ. ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ ಸ್ವಾಸ್ಥಯ ಯೋಜನೆಯಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ, ತೀವ್ರತರ ಖಾಯಿಲೆ ಕಂಡು ಬಂದ ಮಕ್ಕಳು ಸೇರಿದಂತೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇರುವ ಮಕ್ಕಳಿಗೆ ಈ ಯೋಜನೆಯಡಿ ಶಸ್ತ್ರ ಚಿಕಿತ್ಸೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆಯನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಆರೋಗ್ಯ ತಪಾಸಣೆ ಕೈಗೊಂಡ ಸಂದರ್ಭದಲ್ಲಿ ನ್ಯೂನ್ಯತೆಗಳು ಕಂಡು ಬಂದರೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು. ಮಕ್ಕಳಲ್ಲಿ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇದ್ದರೆ ಅಂಥ ಮಕ್ಕಳ ಪೋಷಕರ ಮನವೊಲಿಸಿ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯಡಿ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ 2.12ಲಕ್ಷ ಮಕ್ಕಳ ಸ್ಕ್ರೀನಿಂಗ್ ಕಾರ್ಯ ಪೂರ್ಣವಾಗಿದೆ. ಈ ಪೈಕಿ 432 ಮಕ್ಕಳನ್ನು ಶಸ್ತ್ರ ಚಿಕಿತ್ಸೆ ನಡೆಸಬೇಕಾಗಿದೆ. ಬಹುತೇಕ ಪೋಷಕರು ಹಣವಿಲ್ಲದೆ ತಮ್ಮ ಮಕ್ಕಳ ಶಸ್ತ್ರ ಚಿಕಿತ್ಸೆಗೆ ಹಿಂದೇಟು ಹಾಕುತ್ತಿರುವುದು ಕಂಡು ಬಂದಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಅಂಥ ಪೋಷಕರ ಮನವೊಲಿಸಿ ಸರಕಾರದ ಯೋಜನೆಗಳ ಮೂಲಕ ಶಸ್ಸ್ತ್ರ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು. ಶಸ್ತ್ರಚಿಕ್ತೆಸಗಳನ್ನು ಮಾಡಿಸುವಾಗ ಪ್ರತ್ಯೇಕವಾರು ವಿಭಾಗ ಮಾಡಿ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ, ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಇಓ ಸೂಚನೆ ನೀಡಿದರು.
ಸಮಗ್ರ ಬಾಲವಿಕಾಸ ಯೋಜನೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ಅನುಷ್ಠಾನ ಮಾಡಬೇಕು. ಆರೋಗ್ಯ ಸೇವೆ ಅತೀ ಮುಖ್ಯವಾಗಿದ್ದು, ಜಿಲ್ಲೆಯ ಯಾವುದೇ ಮಕ್ಕಳು ಆರೋಗ್ಯ ಸೇವೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ರಾಹುಲ ಶಿಂಧೆ ಹೇಳಿದರು.
ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಮಾತ್ರ ಜನೌಷಧಿ ಕೇಂದ್ರ ತೆರೆಯಲಾಗಿದೆ. ಆದರೆ ಸರಕಾರದ ಸುತ್ತೊಲೆಯನ್ವಯ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿಯೂ ಸಹ ಜನೌಷಧಿ ಕೇಂದ್ರ ತೆರೆಯುವುದರಿಂದ ಜನರಿಗೆ ಅನುಕೂಲವಾಗಲಿದ್ದು, ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ಸಮಾಲೋಚಕರು ನಿಯಮಿತವಾಗಿ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಮಕ್ಕಳಿಗೆ ಪರಿಣಾಮಕಾರಿಯಾಗಿ ಆಪ್ತ ಸಮಾಲೋಚನೆ ನಡೆಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹವಾದ ಗರ್ಭೀಣಿಯರಿಗೆ ಹೆರಿಗೆ ಕಷ್ಟವಾಗಿ ಸಾವು-ನೋವು ಹೆಚ್ಚಾಗುವ ಸಂಭವವಿರುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯವಿವಾಹ ತಡೆಗಟ್ಟಲು ಸಂಬAಧಿಸಿದ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕಾರ್ಯೋನ್ಮುಖವಾಗುವಂತೆ ಸಿಇಓ ಸಲಹೆ ನೀಡಿದರು.
ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮ(ಎನ್ ಡಿ ಡಿ)
ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮ(ಎನ್ ಡಿ ಡಿ) ಅನುಷ್ಠಾನದಲ್ಲಿ ವಿಜಯಪುರ ನಗರದಲ್ಲಿ ಪ್ರಗತಿ ಕುಂಠಿತವಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಸೂಕ್ತ ಪ್ರಗತಿ ಸಾಧಿಸಬೇಕು ಎಂದು ಅವರು ಹೇಳಿದರು.
ಪ್ಲೋರೋಸಿಸ್ ಕಾರ್ಯಕ್ರಮ
ರಾಜ್ಯದ ರಾಯಚೂರು ಹಾಗೂ ವಿಜಯಪುರ ಜಿಲ್ಲೆಯಲ್ಲಿ ಜಲಧಾರೆ ಯೋಜನೆಗೆ ಅನುಮತಿ ದೊರೆತಿದ್ದು, ಪ್ಲೋರೈಡ್ ಅಂಶದ ನೀರಿನಿಂದ ಮಕ್ಕಳಲ್ಲಾಗುವ ಆರೋಗ್ಯ ಸಮಸ್ಯೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಪ್ಲೋರೈಡ್ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಡೆಂಟಲ್ ಫ್ಲೋರೋಸಿಸ್ ಕುರಿತಾಗಿಯೂ ಸಹ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಎಲ್ಲ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವ್ಯವಸ್ಥೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ನ್ಯೂನತೆ ಇದ್ದಲ್ಲಿ ತಕ್ಷಣ ಮಾಹಿತಿ ಒದಗಿಸಬೇಕು. ತಕ್ಷಣ ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಆದ್ಯತೆ ನೀಡಿ, ನೀರಿನ ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರು ಕಲುಷಿತವಾಗದಂತೆ ನೋಡಿಕೊಳ್ಳಬೇಕು. ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೂರೈಸುವ ಕುಡಿಯುವ ನೀರಿನಲ್ಲಿ ಯಾವುದೇ ಲೋಪ ಸಹಿಸಲಾಗುವುದಿಲ್ಲ. ಲೋಪ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, 15 ವರ್ಷಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ಪ್ರಗತಿ ಕುಂಠಿತವಾಗಿರುವ ಬಗ್ಗೆ ಸೂಕ್ತ ಪ್ರಗತಿ ಸಾಧಿಸಬೇಕು. ಶಾಲಾ ಶಿಕ್ಷಕರ ಸ್ಕ್ರೀನಿಂಗ್ ಬಾಕಿ ಇರುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ರಾಹುಲ ಶಿಂಧೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿ. ಪಂ. ಯೋಜನಾ ನಿರ್ದೇಶಕ ನಿಂಗಪ್ಪ ಗೋಠೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುರೇಶ ಚವ್ಹಾಣ, ಆರ್ ಸಿ ಎಚ್ ಅಧಿಕಾರಿ ಕೆ. ಡಿ. ಗುಂಡಬಾವಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್. ಎಲ್. ಲಕ್ಕಣ್ಣವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಕೆ. ಕೆ. ಚವ್ಹಾಣ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.